ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಬೀಳಗಿ ಗ್ರಾಮದ ಸ್ಮಶಾನ ಭೂಮಿ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರ್ನಾಲ್ಕು ದಿನದಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಗ್ರಾಮ ವಾಸ್ತವ್ಯ ಕುಷ್ಟಗಿ ತಾಲೂಕಿನ ಬೀಳಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ತಿಂಗಳು ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿತ್ತು. ಇಂದು ಎರಡನೇ ಗ್ರಾಮವಾಗಿ ಬೀಳಗಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿದೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತದೆ. ಬೀಳಗಿಯಲ್ಲಿ ಸ್ಮಶಾನ ಭೂಮಿಯ ಸಮಸ್ಯೆ ಇತ್ತು. ಸ್ಮಶಾನಕ್ಕೆ ಜಾಗ ಹಾಗೂ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಮೂರ್ನಾಲ್ಕು ದಿನದಲ್ಲಿ ಅಭಿವೃದ್ಧಿ ಕೆಲಸ ಶುರುವಾಗಲಿದೆ ಎಂದರು.
ಗಾಂವಠಾಣಾ ಜಾಗದಲ್ಲಿ ಮನೆ ನಿರ್ಮಾಣ ಮಾಡಿರುವವರಲ್ಲಿ ಅರ್ಹ ಫಲಾನುಭವಿಗಳಾಗಿದ್ದರೆ ಗ್ರಾಮ ಪಂಚಾಯತಿ ಮೂಲಕ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ. ಜೊತೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸವರಾಜ, ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಕುಷ್ಟಗಿ ತಹಶೀಲ್ದಾರ್ ಎಂ. ಸಿದ್ದೇಶ್, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಮಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಬಿ. ದಾನರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.