ಗಂಗಾವತಿ (ಕೊಪ್ಪಳ): ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸೇರಿದ ಕುಟೀರ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ಪಂಪಾ ಸರೋವರದಲ್ಲಿ ಇಂದು ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಪಂಪಾ ಸರೋವರದಲ್ಲಿರುವ ಜಯಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ಉಳಿದುಕೊಳ್ಳಲು ಈ ಕುಟೀರವನ್ನು ನಿರ್ಮಾಣ ಮಾಡಲಾಗಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.