ಕೊಪ್ಪಳ: ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರವೇ ಮುಖ್ಯವಾಗಿದೆ. ರೈತರ ಸಮಸ್ಯೆಗೆ ಸ್ಪಂದಿಸುವುದು ಮುಖ್ಯವಾಗದೆ ಸರ್ಕಾರ ಉಳಿಸಿಕೊಳ್ಳುವುದು ಅವರಿಗೆ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿರುವ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ನಿವಾಸದಲ್ಲಿ ಮಾತನಾಡಿದ ಅವರು, ಭತ್ತ ಹಾಗೂ ಮೆಕ್ಕೆಜೋಳದ ಬೆಲೆಗಳು ಕುಸಿತಗೊಂಡು ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಎಂದರೆ ಎಲ್ಲರೂ ಒಂದೇ. ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹಧನ ಘೋಷಿಸಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.
ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಬೆಂಬಲ ಬೆಲೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಇದೇ 30 ರಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿ ಬಳಿಕ ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ. ಇನ್ನು ಈ ಸರ್ಕಾರ ಸಮಾಜ ಒಡೆಯುವುದಕ್ಕೆ ಏನೇನು ಬೇಕೋ ಅದನ್ನು ಮಾಡುತ್ತಿದೆ. ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.