ಕೊಪ್ಪಳ:ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಗಟ್ಟಲು ಶತಾಯಗತಾಯ ಪ್ರಯತ್ನ ಮಾಡಿತ್ತಿದ್ದರೂ ಈ ಅಕ್ರಮಕ್ಕೆ ಇನ್ನೂ ಕಡಿವಾಣ ಬಿದ್ದಿಲ್ಲ. ಹೀಗಾಗಿ ಇದನ್ನು ತಡೆಗಟ್ಟಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಒಂದು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕಾದವರಲ್ಲಿಯೇ ಕೆಲವರು ಇದಕ್ಕೆ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕಾಗಿ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತಿಂಗಳಿಗೆ ಕನಿಷ್ಠ 10 ಪ್ರಕರಣವನ್ನಾದರೂ ದಾಖಲು ಮಾಡಲು ಕೊಪ್ಪಳ ಎಸ್ಪಿ, ಪೊಲೀಸ್ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.
ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಲು ಕೊಪ್ಪಳ ಎಸ್ಪಿಯ ಮಾಸ್ಟರ್ ಪ್ಲಾನ್ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ರಾಜಶೇಖರ್ ಪಾಟೀಲ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ ಪೊಲೀಸರ ಬಗ್ಗೆ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಕೇವಲ ಟ್ರ್ಯಾಕ್ಟರ್ಗಳ ಮೇಲೆ ಮಾತ್ರ ಕೇಸ್ ದಾಖಲು ಮಾಡುತ್ತಿದ್ದಾರೆ, ದೊಡ್ಡ ಟಿಪ್ಪರ್ಗಳ ಮೇಲೆ ಪೊಲೀಸರು ಯಾಕೆ ಕೇಸ್‍ಗಳನ್ನು ದಾಖಲಿಸುತ್ತಿಲ್ಲ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹಾಗೂ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಪ್ರಶ್ನಿಸಿದ್ದರು. ಈ ಆರೋಪದಿಂದ ಮುಕ್ತವಾಗಲು ಎಸ್ಪಿ ರೇಣುಕಾ ಸುಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದು, ಕಟ್ಟುನಿಟ್ಟಿನ ಆದೇಶವೊಂದನ್ನು ಹೊರಡಿಸಿದ್ದಾರೆ.
ಈ ಆದೇಶದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯ ಮೇಲೆ ಹದ್ದಿನ ಕಣ್ಣಿಟ್ಟು ತಿಂಗಳಿಗೆ ಒಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕನಿಷ್ಠ 10 ಕೇಸ್‍ಗಳನ್ನಾದರೂ ದಾಖಲಿಸುವಂತೆ ಉಲ್ಲೇಖಿಸಿದ್ದು, ಈ ಕುರಿತು ಅಧಿಕಾರಿಗಳಿಗೆ ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೇ ಕೇವಲ ಟ್ರ್ಯಾಕ್ಟರ್ಗಳ ಮೇಲೆ ಕೇಸ್ ಹಾಕಲಾಗುತ್ತಿದೆ ಎಂಬ ಆರೋಪದಿಂದ ಮುಕ್ತವಾಗಿಸಲು ಟ್ರ್ಯಾಕ್ಟರ್ಗಳ ಜೊತೆಗೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ಟಿಪ್ಪರ್ಳ ಮೇಲೆಯೂ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.