ಕುಷ್ಟಗಿ (ಕೊಪ್ಪಳ):ಪದವೀಧರ ಶಿಕ್ಷಕರ ನೇಮಕಾತಿಗೆ ನಿಗದಿಗೊಳಿಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಕನಿಷ್ಠ ಅಂಕಗಳನ್ನು ತೆಗೆದು ಹಾಕಿ ಮೆರಿಟ್ ಹಾಗೂ ರೋಸ್ಟರ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ನಿಯಮಗಳಿಗೆ ತಿದ್ದುಪಡಿ ಮಾಡಬೇಕೆಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಹಾಗೂ ಕಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ 20 ಸಾವಿರ ಹುದ್ದೆಗಳು ಖಾಲಿ ಇವೆ. ಕಳೆದ 6 ವರ್ಷಗಳಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆ ನೇಮಕಾತಿ ನಡೆದಿಲ್ಲ. ಹೀಗಾಗಿ ಅತಿಥಿ ಶಿಕ್ಷಕರನ್ನು ಖಾಲಿ ಇರುವ ಹುದ್ದೆಗಳಿಗೆ ಹೊಂದಿಸಿ ಸರಿದೂಗಿಸುವ ವಿಫಲ ಪ್ರಯತ್ನ ನಡೆಯುತ್ತಿದೆ. ಅತಿಥಿ ಶಿಕ್ಷಕ ನೇಮಕಾತಿಯಿಂದ ಗ್ರಾಮೀಣ ಭಾಗದಲ್ಲಿ ವಿಷಯವಾರು ಶಿಕ್ಷಕರು ಲಭಿಸದೇ ಇರುವುದು ಗ್ರಾಮೀಣ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಎರಡು ಸಲ 10 ಸಾವಿರ ಪಧವಿಧರರು ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಮಾಡಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿದ ಕಠಿಣ ನಿಯಮಗಳ ಕಾರಣ ಸರ್ಜಾರ ಬಯಸಿದ್ದಷ್ಟು ಅಭ್ಯರ್ಥಿಗಳ ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಹುದ್ದೆಗಳು ಖಾಲಿ ಇವೆ. ಕಾಲಕಾಲಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸದೇ ಇರುವುದು ಲಕ್ಷಾಂತರ ಅರ್ಹ ನಿರುದ್ಯೋಗಿಗಳಿಗೆ ಅವಕಾಶದಿಂದ ವಂಚಿತರಾಗುವಂತಾಗಿದೆ. ಈ ಹಿನ್ನೆಲೆಯಲ್ಲಿ ವರ್ಷದಲ್ಲಿ ಎರಡು ಬಾರಿ ಅರ್ಹತಾ ಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.