ಕೊಪ್ಪಳ:ಶಾಸಕನಾಗಿರುವ ಏಳು ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಿದ್ದು, ನೀರಾವರಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದ್ದೇನೆ. ಕ್ಷೇತ್ರದ ಪ್ರತಿ ಗ್ರಾಮಕ್ಕೂ ಮೂಲಸೌಕರ್ಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕನಾಗಿ 7 ವರ್ಷದ ಈ ಅವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ವಿಶೇಷವಾಗಿ ಶಿಕ್ಷಣ, ಆರೋಗ್ಯ ಹಾಗೂ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ಗ್ರಾಮಕ್ಕೂ ಎಲ್ಲ ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಮಾಣಿಕವಾಗಿ ಆದ್ಯತೆ ನೀಡಲಾಗಿದೆ. ದೇಶದ ಉದ್ದಗಲಕ್ಕೂ ಭಾಷಣ ಮಾಡಿ ಅಧಿಕಾರ ಪಡೆದ ಪ್ರಧಾನಿ ಮೋದಿ ಅಚ್ಚೆ ದಿನ್ ಬರುತ್ತವೆ ಎಂದು ಜನತೆಗೆ ಸುಳ್ಳು ಹೇಳಿ ದೇಶದ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ. ಆದರೆ, ಜನರಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದರು.