ಕೊಪ್ಪಳ: ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೊಪ್ಪಳ: ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ - ದಲಿತ ಸಂಘರ್ಷ ಸಮಿತಿ
ರಾಜ್ಯದ ಅನೇಕ ಕಡೆಗಳಲ್ಲಿ ದಲಿತರ ಮೇಲೆ ಹಲ್ಲೆ, ಅತ್ಯಾಚಾರ, ಕೊಲೆಯಂತಹ ಘಟನೆಗಳು ನಡೆದಿವೆ. ಇಂತಹ ಕೃತ್ಯಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಬೇರೆ-ಬೇರೆ ಭಾಗಗಳಲ್ಲಿ ದಲಿತರ ಮೇಲೆ ಹಲ್ಲೆ, ಅತ್ಯಾಚಾರ, ಕೊಲೆಯಂತಹ ಘಟನೆಗಳು ನಡೆದಿವೆ. ದಲಿತರ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯ, ದಬ್ಬಾಳಿಕೆ ಹಾಗೂ ಹಲ್ಲೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇಂತಹ ಕೃತ್ಯ ನಡೆಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ದಲಿತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣದಲ್ಲಿ ಕೆಲವೆಡೆ ಪೊಲೀಸರು ನ್ಯಾಯಯುತವಾಗಿ ಕೆಲಸ ಮಾಡುತ್ತಿಲ್ಲ, ಪಕ್ಷಪಾತ ಮಾಡುತ್ತಿದ್ದಾರೆ. ಇಂತಹವರ ಮೇಲೂ ಕೂಡಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ದಲಿತರ ಮೇಲೆ ನಡೆಯುವ ದೌರ್ಜನ್ಯ ನಿಗ್ರಹಕ್ಕೆ, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತ್ಯೇಕ ವಿಶೇಷ ನ್ಯಾಯಾಲಯ ಸ್ಥಾಪಿಸಿ ಪ್ರಕರಣಗಳ ತ್ವರಿತ ವಿಚಾರಣೆ ನಡೆಸಲು ಸಂವಿಧಾನಾತ್ಮಕವಾಗಿ ಕಾನೂನು ತಿದ್ದುಪಡಿ ಮಾಡಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.