ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯಾದ್ಯಂತ ಇಂದು ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿ ಇರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಜೆ.ಬಿ. ಮಜ್ಜಗಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ.. ಕರ್ನಾಟಕ ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ... ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಡಿ.ಹೆಚ್.ಪೂಜಾರ, ತಾಲೂಕಿನ ನರೇಗಲ್ ಗ್ರಾಮದ ಸರ್ವೆ ನಂಬರ್ 62/2ರಲ್ಲಿನ 9 ಎಕರೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಇಲ್ಲಿ ಮರಳು ಗಣಿಗಾರಿಕೆ ನಡೆಸಿದರೆ ಹಳ್ಳದ ನೀರು ಗ್ರಾಮಕ್ಕೆ ನುಗ್ಗುತ್ತದೆ. ಹೀಗಿದ್ದಾಗ್ಯೂ ಅಧಿಕಾರಿಗಳು ದಿಕ್ಕುತಪ್ಪಿಸುತ್ತಿದ್ದಾರೆ. ಇಲ್ಲಿ ಕೂಡಲೇ ಮರಳು ಗಣಿಗಾರಿಕೆ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಇನ್ನು ಅಕ್ರಮ ಸಕ್ರಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ಹಕ್ಕುಪತ್ರ ನೀಡಬೇಕು. ನಾಲಾ ಹಾಗೂ ಸರ್ಕಾರಿ ಭೂಮಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಭಾಗ್ಯನಗರದಲ್ಲಿರುವ ಅಲೆಮಾರಿ ಕುಟುಂಬಗಳಿಗೆ ಸೂರು ಒದಗಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಂದು ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸಾಂಕೇತಿಕ ಹೋರಾಟ ಮಾಡಿದ್ದೇವೆ. ಮುಂದೆ ಈ ಕುರಿತಂತೆ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದರು.