ಕುಷ್ಟಗಿ (ಕೊಪ್ಪಳ): ಕೋವಿಡ್ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವದ ಸರಳ ಸಮಾರಂಭದಲ್ಲಿ ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಹಶೀಲ್ದಾರ್ ಎಂ.ಸಿದ್ದೇಶ ಹೇಳಿದರು.
ಸ್ವಾತಂತ್ರ್ಯೋತ್ಸವಕ್ಕೆ ಮಾಸ್ಕ್ ಕಡ್ಡಾಯ: ತಹಶೀಲ್ದಾರ್ - Kustagi latest news
ಕುಷ್ಟಗಿ ತಹಶೀಲ್ ಕಚೇರಿಯಲ್ಲಿ ತಹಶೀಲ್ದಾರ್ ಎಂ.ಸಿದ್ದೇಶ್ ಅವರು ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ ನಡೆಸಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಹತ್ತು ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರು ಭಾಗವಹಿಸುವಂತಿಲ್ಲ ಎಂದರು.
ಪೊಲೀಸ್ ಹಾಗೂ ಗೃಹರಕ್ಷಕ ದಳದ ಪಥ ಸಂಚಲನ ಮಾತ್ರ ನಡೆಯುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ದೇಶಭಕ್ತಿ ಗೀತೆ ಹಾಡಲು ಅವಕಾಶ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ಯೋಧರನ್ನು ಅವರ ಮನೆಗೆ ತೆರಳಿ ಸನ್ಮಾನಿಸಲಾಗುವುದು. ಆಯಾ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.