ಕರ್ನಾಟಕ

karnataka

ETV Bharat / state

ರಾಜ್ಯಾದ್ಯಂತ 108 ಆಂಬ್ಯುಲೆನ್ಸ್ ಸಹಾಯವಾಣಿಯಲ್ಲಿ ತಾಂತ್ರಿಕ ದೋಷ.. ರೋಗಿಗಳ ಪರದಾಟ! - Helpline for ambulance in karnataka

108 ಆಂಬ್ಯುಲೆನ್ಸ್ ಸಹಾಯವಾಣಿಯಲ್ಲಿ ತಾಂತ್ರಿಕ ದೋಷ. ಎರಡು ಮೂರು ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಆರೋಗ್ಯ ಸಚಿವ ಸುಧಾಕರ್ ಭರವಸೆ.

ಆಂಬ್ಯುಲೆನ್ಸ್
ಆಂಬ್ಯುಲೆನ್ಸ್

By

Published : Sep 25, 2022, 5:16 PM IST

ಬೆಂಗಳೂರು: 108 ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಎರಡು ಮೂರು ದಿನಗಳಿಂದ 108 ತುರ್ತು ಸಹಾಯವಾಣಿ ಕರೆಯಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ರೋಗಿಗಳಿಗೆ ಸಕಾಲದಲ್ಲಿ ಆಂಬ್ಯುಲೆನ್ಸ್ ಲಭ್ಯವಾಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೂ ಕನೆಕ್ಟ್ ಆಗುತ್ತಿಲ್ಲ.‌ ಸುಮಾರು ಹತ್ತಾರು ಬಾರಿ ಕರೆ ಮಾಡಿದರೆ ಕರೆ ಕನೆಕ್ಟ್ ಆಗುತ್ತಿದೆ.‌ ಇದರಿಂದ ರೋಗಿಗಳು ಪರದಾಡುವಂತಾಗಿದೆ. ರಾಜ್ಯದ ವಿವಿಧೆಡೆ ಸಮಸ್ಯೆ ಎದುರಾಗಿದ್ದು, ರೋಗಿಗಳು ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗದೆ ಸಂಕಷ್ಟಕ್ಕೊಳಗಾಗಿದ್ದಾರೆ.

ರಾಜ್ಯಾದ್ಯಂತ 108 ಆಂಬ್ಯುಲೆನ್ಸ್ ಸಹಾಯವಾಣಿಯಲ್ಲಿ ತಾಂತ್ರಿಕ ದೋಷ.

108 ತುರ್ತು ಸಹಾಯವಾಣಿ ಸಮಸ್ಯೆ ಏನು?108 ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು. ತಾಂತ್ರಿಕ ಸಮಸ್ಯೆಯಿಂದ ಈಗ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ.

2008ರಲ್ಲಿ 108 ಸಹಾಯವಾಣಿಯನ್ನು ಪ್ರಾರಂಭಿಸಲಾಗಿತ್ತು. ಇದೀಗ ಆನ್ ಲೈನ್ ವ್ಯವಸ್ಥೆಯ ಮದರ್ ಬೋರ್ಡ್​​ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಐಟಿ ಹಾರ್ಡ್‌ವೇರ್‌ನಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ಗುತ್ತಿಗೆ ಪಡೆದುಕೊಂಡಿರುವ GVK-EMRI ಸಂಸ್ಥೆ ಬಗೆಹರಿಸುವ ಕಾರ್ಯದಲ್ಲಿದೆ. ಹಾರ್ಡ್ ವೇರ್ ತಾಂತ್ರಿಕ ದೋಷ ಬಗೆಹರಿಸಲು ಇನ್ನೂ ಎರಡು ಮೂರು ದಿನಗಳು ಬೇಕಾಗಬಹುದು ಎನ್ನಲಾಗಿದೆ.

(ಇದನ್ನೂ ಓದಿ: ಆಂಬ್ಯುಲೆನ್ಸ್​ ಚಾಲಕನ ಸಮಯಪ್ರಜ್ಞೆ.. ತುಂಬಿ ಹರಿಯುವ ಹಳ್ಳ ದಾಟಿ ಗರ್ಭಿಣಿಯನ್ನು ರಕ್ಷಿಸಿದ 108 ಸಿಬ್ಬಂದಿ)

ಈಗಾಗಲೇ ಎಲ್ಲಾ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್‌ಫರ್‌ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ತುರ್ತು ಸೇವೆ ಒದಗಿಸುವ 112 ಸಹಾಯವಾಣಿಯಲ್ಲಿರುವ 2-3 ಸಿಬ್ಬಂದಿ ಬದಲು ಅಲ್ಲಿಗೆ 7-8 ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಈ ಮೂಲಕ 108 ಸಹಾಯವಾಣಿಯ ತಂಡದ ಮುಖ್ಯಸ್ಥರಿಗೆ ಕರೆಗಳನ್ನು ಡೈವರ್ಟ್ ಮಾಡಿ ಆ ಮೂಲಕ ಮ್ಯಾನ್ಯುವಲ್ ಐಡಿ ಜನರೇಟ್ ಮಾಡಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜೊತೆಗೆ 104- ಸಹಾಯವಾಣಿಯನ್ನು ಕೂಡ ಬಳಸಿಕೊಂಡು 108-ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್‌ಗಳನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್‌ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೊಪ್ಪಳದಲ್ಲಿ ರೋಗಿಗಳ ಪರದಾಟ:108 ಆಂಬ್ಯುಲೆನ್ಸ್ ಸೇವೆ ಪಡೆಯಲು ಕರೆ ಮಾಡಿದರೆ ಕರೆ ಸ್ವೀಕರಿಸುವಲ್ಲಿ ಗಂಟೆಗಟ್ಟಲೆ ವಿಳಂಬವಾಗುತ್ತಿದ್ದು, ತುರ್ತು ಚಿಕಿತ್ಸೆ ಪಡೆಯಬೇಕಾದ ರೋಗಿಗಳು ಪರದಾಡುವಂತಾಗಿದೆ. ಈ ಕುರಿತು 108 ವಾಹನ ಚಾಲಕರ ಸಂಘದ ಜಿಲ್ಲಾ ಅಧ್ಯಕ್ಷ ಅಂಬಣ್ಣ ಮಾತನಾಡಿ, ಇಂದು ಸಂಜೆಯೊಳಗೆ ಎಲ್ಲವೂ ಸರಿಯಾಗಲಿದೆ ಎಂಬ ಭರವಸೆ ನೀಡಿದ್ದಾರೆ.

ABOUT THE AUTHOR

...view details