ಕೊಪ್ಪಳ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೂ ಸಹ ಜಿಲ್ಲೆಯ ಹಲವೆಡೆ ಕುಡಿಯುವ ನೀರಿಗಾಗಿ ಈಗಾಗಲೇ ತತ್ವಾರ ಶುರುವಾಗಿದ್ದು, ಬೇಸಿಗೆ ಸಂದರ್ಭದಲ್ಲಿ ಈ ಸಮಸ್ಯೆ ಉಲ್ಬಣವಾಗಲಿದೆ ಎಂಬ ವರದಿ ಹೊರಬಿದ್ದಿದೆ.
ಹೌದು, ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 321 ಜನವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಅಂದಾಜಿಸಿ ಈ ವರದಿಯನ್ನು ಸಿದ್ಧಪಡಿಸಿದೆ.
ಮಳೆ ಇಲ್ಲದೆ ಪದೇ ಪದೆ ಬರಗಾಲಕ್ಕೆ ತುತ್ತಾಗುವ ಕೊಪ್ಪಳ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಬೇಸಿಗೆ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುತ್ತದೆ. ಮಳೆ ಬಿದ್ದರೆ ಅಂತಹ ಸಮಸ್ಯೆ ಉದ್ಭವವಾಗುವುದಿಲ್ಲ. ಆದರೆ ಈ ಬಾರಿ ಹಿಂಗಾರು ಮತ್ತು ಮುಂಗಾರು ವಿಫಲವಾಗಿರುವುದರಿಂದ ಕುಡಿಯುವ ನೀರಿನ ತತ್ವಾರ ಶುರುವಾಗುವುದರಲ್ಲಿ ಅನುಮಾನವೇ ಇಲ್ಲ. ಜಿಲ್ಲೆಯಲ್ಲಿ ಅಂತರ್ಜಲ ಪಾತಾಳಕ್ಕೆ ಇಳಿದಿದೆ. ಕೆರೆ ಕಟ್ಟೆಗಳು ನೀರಿಲ್ಲದೆ ಒಣಗಲು ಆರಂಭಿಸಿವೆ. ಹೀಗಾಗಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸಾಧ್ಯತೆ ಇದೆ.
ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುವ ಆತಂಕ ವ್ಯಕ್ತಪಡಿಸಿರುವ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ ವರದಿಯನ್ನು ಸಿದ್ಧಪಡಿಸಿದೆ. ಆ ವರದಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 737 ಜನವಸತಿ ಪ್ರದೇಶಗಳಿದ್ದು, ಈ ಪೈಕಿ ಸದ್ಯ ಎರಡು 279 ವಸತಿ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಇದರ ಪ್ರಮಾಣ 321 ಆಗಲಿದೆ ಎಂದು ಅಂದಾಜಿಸಲಾಗಿದೆ. ಗಂಗಾವತಿ ತಾಲೂಕಿನಲ್ಲಿ 68 ಜನವಸತಿ ಪ್ರದೇಶ, ಕೊಪ್ಪಳ ತಾಲೂಕಿನಲ್ಲಿ 83, ಕುಷ್ಟಗಿ ತಾಲೂಕಿನಲ್ಲಿ 98 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 72 ಗ್ರಾಮಗಳು ಸೇರಿದಂತೆ ಒಟ್ಟು 321 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ ಎಂದು ಅಂದಾಜಿಸಲಾಗಿದೆ.