ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಇಬ್ಬರು ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಿಐಡಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರಿಪಡಿಸಿದ್ದರು. ಇದೀಗ ಕೋರ್ಟ್ ಇಬ್ಬರು ಅಧಿಕಾರಿಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಕೃಷಿ ಸಚಿವರ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ ಆರೋಪದ ಮೇರೆಗೆ ಕೆ.ಆರ್.ನಗರ ತಾಲೂಕಿನ ಕೃಷಿ ಇಲಾಖೆಯ ನಿರ್ದೇಶಕ ಗುರುಪ್ರಸಾದ್ ಮತ್ತು ಇಲಾಖೆಯ ಅಧಿಕಾರಿಯಾದ ಸುದರ್ಶನ್ ಎಂಬವರನ್ನು ಸಿಐಡಿ ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದರು. ಕಚೇರಿಯಲ್ಲಿದ್ದ ಕೆಲವು ದಾಖಲಾತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಸಚಿವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದರು ಎಂದು ಹೇಳಲಾಗಿತ್ತು. ಇದಾದ ನಂತರ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ನಂತರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ತನಿಖೆಯನ್ನು ಸಿಐಡಿಗೆ ವಹಿಸಿತ್ತು.