ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರದ ಹಾಗೂ ಕರ್ನಾಟಕದ ಹಿತ ಕಾಪಾಡದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಹೋರಾಟ ಮುಂದುವರೆದಿದೆ. ಬೆಂಗಳೂರು ಮೈಸೂರು ಹೆದ್ದಾರಿ ತಡೆ ಮಾಡಿ, ಕಾವೇರಿ ನೀರು ಉಳಿಸಿಕೊಳ್ಳಲು ಮುಂದಾಗದ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಂಕಷ್ಟದ ಸಮಯದಲ್ಲಿ ಮಧ್ಯಪ್ರವೇಶ ಮಾಡದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಕಿಡಿ ಕಾರಿದರು.
ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ 64ನೇ ದಿನದ ನಿರಂತರ ಧರಣಿಯಲ್ಲಿ ಜಿಲ್ಲಾ ರೈತ ಉತ್ಪಾದಕರ ಕಂಪನಿಗಳ ಒಕ್ಕೂಟ, ಸ್ವಾಭಿಮಾನಿ ಒಕ್ಕಲಿಗರ ವೇದಿಕೆ ಹಾಗೂ ಮಹಿಳಾ ಒಕ್ಕೂಟದ ಕಾರ್ಯಕರ್ತರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು. ಕಾವೇರಿ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ, ಆಳುವ ಸರ್ಕಾರಗಳು ಕನ್ನಡ ನಾಡಿನ ಹಿತ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿದಿದ್ದ ಸಿಡಬ್ಲ್ಯೂಆರ್ಸಿ: ವಾರದ ಹಿಂದೆ ಮತ್ತೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಆದೇಶ ನೀಡಿತ್ತು. ನವೆಂಬರ್ 1 ರಿಂದ 15 ರವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಸಿಡಬ್ಲ್ಯೂಆರ್ಸಿ ಕರ್ನಾಟಕಕ್ಕೆ ಆದೇಶ ನೀಡಿತ್ತು.