ಮಂಡ್ಯ : ಮಂಡ್ಯದಲ್ಲಿ ಮತ್ತೆ ಕಾವೇರಿ ಹೋರಾಟ ಮುಂದುವರಿದಿದೆ. ಮತ್ತೆ ತಮಿಳುನಾಡಿಗೆ ನೀರು ಬಿಡಲು ಪ್ರಾಧಿಕಾರದ ಆದೇಶ ಬಂದಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಬಳಿ ಅನ್ನದಾತರು ಪ್ರತಿಭಟನೆ ನಡೆಸಿದರು. ಶ್ರೀರಂಗಪಟ್ಟಣದ ಕಾವೇರಿ ನದಿಯ ಸ್ನಾನಘಟ್ಟದ ಕಾವೇರಿ ನದಿ ಬಳಿ ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಮುಖಂಡ ನಂಜುಂಡೇಗೌಡ ಅವರು ಮಾತನಾಡಿ, ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರ ಕೊಟ್ಟಿರುವ ತೀರ್ಮಾನ ನೋಡಿದ್ರೆ, ಕಾನೂನು ಇಷ್ಟೊಂದು ದುರ್ಬಲವಾಗಿದ್ಯಾ ಅನಿಸುತ್ತದೆ. ನಮಗೆ ಕುಡಿಯಲು ನೀರಿಲ್ಲ. ರೈತರು ನೀರು ಬಿಟ್ಟು ಎದೆಯಮೇಲೆ ಕಲ್ಲು ಹಾಕೊಂಡಿದ್ದಾರೆ. ರಾಜ್ಯ ಸರ್ಕಾರ ರೈತರ ಪರ ನಿಲ್ಲಬೇಕಾದ ಜವಾಬ್ದಾರಿ ಇದೆ ಎಂದಿದ್ದಾರೆ.
ರಾಜ್ಯ ರೈತ ಸಂಘದ ಮುಖಂಡ ಬನ್ನೂರು ನಾರಾಯಣ್ ನೀರಿನ ಕೊರತೆ ಬಗ್ಗೆ ಮನದಟ್ಟು ಮಾಡಿಕೊಳ್ಳುವ ಕೆಲಸವನ್ನು ಮಾಡಬೇಕು. ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡದೆ, ಎಲ್ಲಾ ನಾಯಕರು ಒಟ್ಟಾಗಿ ಧ್ವನಿ ಎತ್ತುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಉಗ್ರ ಚಳವಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಸ್ತೆ ತಡೆ ನಡೆಸಿ ಆಕ್ರೋಶ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದ ಬೆನ್ನಲ್ಲೇ, ಮಂಡ್ಯದಲ್ಲಿ ರೈತರ ಆಕ್ರೋಶ ಕಟ್ಟೆ ಒಡೆದಿದೆ. ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಪ್ರಾಧಿಕಾರದ ಆದೇಶವನ್ನು ವಿರೋಧಿಸಿದೆ. ರೈತರು ಬೆಂಗಳೂರು ಮೈಸೂರು ಹೆದ್ದಾರಿಗಿಳಿದು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ಹಿತರಕ್ಷಣಾ ಸಮತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ನಗರದ ಸರ್ಎಂವಿ ಪ್ರತಿಮೆ ಎದುರು ರೈತ ಹಿತ ರಕ್ಷಣಾ ಸಮಿತಿ ಆಶ್ರಯದಲ್ಲಿ ನಿರಂತರ ಧರಣಿ ನಿರತರಾಗಿರುವ ರೈತರು, ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕಿಡಿಕಾರಿದರು. ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿ ಖುದ್ದು ಹಾಜರಾಗಿ ವಾಸ್ತವ ಸ್ಥಿತಿ ಮನವರಿಕೆ ಮಾಡಿ ಕೊಟ್ಟಿಲ್ಲ. ರಾಜ್ಯ ಸರ್ಕಾರ ತನ್ನ ಹೊಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ರೈತರಿಗೆ ನಿರಂತರವಾಗಿ ದ್ರೋಹ ಮಾಡುತ್ತಾ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಗಸ್ಟ್ ತಿಂಗಳಿನಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರ ಮತ್ತೆ ನೀರು ಬಿಡಲಾಗಿದೆ. ಇದರಿಂದ ಕಾವೇರಿಕೊಳ್ಳದ ಜಲಾಶಯಗಳು ಬರಿದಾಗಿವೆ. ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ 96 ಅಡಿಗೆ ಕುಸಿದಿದೆ. ಬೆಳೆ ರಕ್ಷಣೆಗೆ ನೀರಂತೂ ಇಲ್ಲ. ಕುಡಿಯುವ ನೀರು ಸಹ ಇಲ್ಲದಂತಾಗಲಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರು ಪ್ರಾಧಿಕಾರ ವಾಸ್ತವ ಸ್ಥಿತಿ ಅರಿಯದೆ, ಕಾವೇರಿ ಕೊಳ್ಳದ ಜಲಾಶಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸದೆ ನೀರು ಹರಿಸಿ ಎಂದು ಹೇಳುತ್ತಿರುವುದು ಅವೈಜ್ಞಾನಿಕ. ಎರಡು ರಾಜ್ಯಗಳ ನಡುವೆ ಸಂಘರ್ಷವನ್ನುಂಟು ಮಾಡುತ್ತಿರುವ ಕೇಂದ್ರ ಸರ್ಕಾರ ಈ ಕೂಡಲೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಸಭೆ ನಡೆಸಿ ನಿರ್ಧಾರ:ಕಾವೇರಿ ವಿಚಾರದಲ್ಲಿ ರೈತರಿಗೆ ನಿರಂತರ ಅನ್ಯಾಯವಾಗುತ್ತಿರುವುದನ್ನು ವಿರೋಧಿಸಿ ಹೋರಾಟ ಮಾಡಿಕೊಂಡು ಬಂದಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ಮುಂದಿನ ಹೋರಾಟದ ರೂಪರೇಷೆ ಕುರಿತಂತೆ ನಾಳೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಇದನ್ನೂ ಓದಿ:ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಎಂಎ ಆದೇಶ.. ರಾಜ್ಯಕ್ಕೆ ಮತ್ತೆ ಸಂಕಷ್ಟ