ಮಂಡ್ಯ :ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹಾಗೂ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ ವಿ ರವಿಶಂಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಡ್ಯದ ಮಹಿಳಾ ಕಾಲೇಜು, ವೈದ್ಯಕೀಯ ಕಾಲೇಜಿನಲ್ಲಿ ನಾಯಕರು ಚುನಾವಣಾ ಪ್ರಚಾರ ನಡೆಸಿದ್ದರು. ಇದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಮುಕ್ತವಾಗಿ ತನಿಖೆ ನಡೆಸಲು ನಮಗೆ ಅಧಿಕಾರವಿಲ್ಲ, ನ್ಯಾಯಾಲಯದಿಂದ ಆದೇಶ ತಂದರೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದರು. ಸರ್ಕಾರಿ ಕಾಲೇಜುಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ನಡೆಸಿರುವ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸುವಂತೆ ಚುನಾವಣಾ ಆಧಿಕಾರಿಯು 2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪೂರ್ವ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ಹಾಗೂ ರವಿಶಂಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ:ಮೌಢ್ಯತೆಯ ಪರಮಾವಧಿ : ಹಸುಗೂಸು, ಬಾಣಂತಿಯ ಗ್ರಾಮದಿಂದ ಹೊರಗಿಟ್ಟ ಜನ