ಮಂಡ್ಯ:ಕೊರೊನಾ ಆರ್ಭಟದ ನಡುವೆಯೂ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಯಶಸ್ವಿಯಾಗಿ ಮುಗಿದಿದ್ದು, ಮತ ಎಣಿಕೆ ಕಾರ್ಯ ನಾಳೆ ಏಳು ತಾಲೂಕಿನ ಆಯಾ ಡಿ ಮಸ್ಟರಿಂಗ್ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಂಡ್ಯ ಜಿಲ್ಲೆಯ 230 ಗ್ರಾಪಂಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಸಂಜೆ ವೇಳೆಗೆ ಎಲ್ಲಾ ಫಲಿತಾಂಶ ಹೊರ ಬೀಳಲಿದೆ. 230 ಗ್ರಾಪಂಗಳಲ್ಲಿ ಸ್ಪರ್ಧೆ ಮಾಡಿದ 8,013 ಅಭ್ಯರ್ಥಿಗಳ ಭವಿಷ್ಯ ನಾಳೆ ತಿಳಿಯಲಿದೆ ಎಂದರು.
ಒಟ್ಟು 230 ಗ್ರಾಮ ಪಂಚಾಯಿತಿಗಳಲ್ಲಿ 1481 ಕ್ಷೇತ್ರದಲ್ಲಿ ಚುನಾವಣೆ ನಡೆದಿದ್ದು, 149 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆಯಾಗಿದೆ. ಮದ್ದೂರು ತಾಲೂಕಿನ ಕದಲೂರು ಗ್ರಾಪಂನಲ್ಲಿ 12 ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ ಎಂದು ಮಾಹಿತಿ ನೀಡಿದರು.