ಮಂಡ್ಯ:ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಇತ್ತೀಚೆಗೆ ಭೇದಿಸಿ, ಈಗಾಗಲೇ 9 ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕರಾಳ ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿಯಿರುವ ಆಲೆಮನೆಯೊಂದರ ಶೆಡ್‌ನಲ್ಲಿ ಕರುಳುಬಳ್ಳಿಗಳನ್ನು ಕತ್ತರಿಸುವ ಹೇಯಕೃತ್ಯ ನಡೆಯುತ್ತಿತ್ತು. ಅಷ್ಟೇ ಅಲ್ಲ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎರಡು ವರ್ಷಗಳ ಹಿಂದೆ ಮಾಹಿತಿ ಇದ್ದರೂ ಅವರು ಮೌನವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಡಿಹೆಚ್ಒಗೆ ಜಿಲ್ಲಾಧಿಕಾರಿ ಸೂಚನೆ:ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸೋಮವಾರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ''ರಾಜ್ಯದಲ್ಲಿ ಬೆಳಕಿಗೆ ಬಂದಿರುವ ಭ್ರೂಣ ಹತ್ಯೆ ಪ್ರಕರಣಗಳ ಕುರಿತಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಪ್ರಾಥಮಿಕ ವರದಿ ನೀಡುವಂತೆ ಸೂಚನೆ ಕೊಡಲಾಗಿದೆ" ಎಂದು ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಮಂಡ್ಯ ಡಿಹೆಚ್ಒ ಡಾ.ಮೋಹನ್, ಎಸಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಸೇರಿದಂತೆ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲಿಸಿದ್ದು, ಡಿಸಿಗೆ ಸಮಗ್ರ ವರದಿ ನೀಡಲಿದ್ದಾರೆ.