ಮಂಡ್ಯ: ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಒಂದು ಕಡೆ ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ಹೋರಾಟ ಆರಂಭಿಸಿದ್ದಾರೆ. ಮತ್ತೊಂದು ಕಡೆ ಮೈನಿಂಗ್ ನಂಬಿಕೊಂಡು ಜೀವನ ನಡೆಸುತ್ತಿದ್ದ ಸಾವಿರಾರು ಮಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ ಸಂಸದೆ ಸುಮಲತಾ ತಮ್ಮ ಹೋರಾಟವನ್ನು ದೆಹಲಿ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇನ್ನೊಂದೆಡೆ, ಮಂಡ್ಯ ಜಿಲ್ಲಾಡಳಿತ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಬ್ರೇಕ್ ಹಾಕಿದೆ. ಹೀಗಾಗಿ ಈ ಗಣಿಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಚನ್ನನಕೆರೆ, ಜಕ್ಕನಹಳ್ಳಿ ಹಾಗೂ ಶ್ರೀರಾಂಪುರ ಸೇರಿದಂತೆ ಹತ್ತಾರು ಗ್ರಾಮಗಳ ಗ್ರಾಮಸ್ಥರು ಮಂಡ್ಯದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿದ್ದಾರೆ.