ಮಂಡ್ಯ: ಕೋವಿಡ್ ಮೂರನೇ ಅಲೆ ಎದುರಾಗುವ ಸಂದರ್ಭ ಬಂದರೂ ಸಹ ಆಕ್ಸಿಜನ್ ಘಟಕ ನಿರ್ಮಾಣ ಕುಂಠಿತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಎರಡನೇ ಬಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಡ್ಯಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಕೋವಿಡ್ ನಿಯಂತ್ರಣ ಸಂಬಂಧ ಇಂದು ಅಧಿಕಾರಿಗಳ ಜೊತೆ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.
ಕೊರೊನಾ 2ನೇ ಅಲೆ ವೇಳೆ ಆಕ್ಸಿಜನ್ ಅಭಾವದಿಂದ ಸೋಂಕಿತರು ಸಾಕಷ್ಟು ಸಂಕಷ್ಟ ಪಟ್ಟರು. ಹೀಗಾಗಿ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ, ಈವರೆಗೆ ನಾಲ್ಕು ತಾಲೂಕುಗಳಲ್ಲಿ ಮಾತ್ರ ಘಟಕ ಸ್ಥಾಪನೆಯಾಗಿವೆ. ಇನ್ನುಳಿದ ಘಟಕಗಳು ಸ್ಥಾಪನೆ ಆಗುವುದು ಯಾವಾಗ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಬಳಿಕ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಹೊಂದಬೇಕು. ಹೊರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ನಮ್ಮ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಮದುವೆ, ಸಮಾರಂಭಗಳಲ್ಲಿ 30ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ಡಿಸಿಗೆ ಸೂಚನೆ ನೀಡಿದರು.
ಓದಿ: ಮಾಜಿ ಸಿಎಂ BSY ವಿರುದ್ಧ ಭ್ರಷ್ಟಾಚಾರ ಆರೋಪ: ಅರ್ಜಿ ವಜಾಗೊಳಿಸಿದ ಹೈಕೋರ್ಟ್