ಮಂಡ್ಯ:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯ ಕಾಮಗಾರಿ ಇದೀಗ ಅಂತಿಮ ಹಂತಕ್ಕೆ ಬಂದಿದೆ. ಕಾಮಗಾರಿ ವೀಕ್ಷಿಸಲು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಆಗಮಿಸಿದ್ದು, ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ನಡುವೆ ಹೆದ್ದಾರಿಗೆ ನಾಮಕರಣ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಲ್ಲಿ ಪತ್ರದ ಜಟಾಪಟಿ ನಡೆದಿದೆ ಎಂದು ತಿಳಿದುಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡಿದೆ. ಕೆಲವೇ ದಿನಗಳಲ್ಲಿ ಈ ಕೆಲಸ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಡಲಾಗುತ್ತದೆ.
ಈಗಾಗಲೇ ಕಾಮಗಾರಿ ಶೇ 88ರಷ್ಟು ಮುಕ್ತಾಯಗೊಂಡಿದೆ. ಬೆಂಗಳೂರಿನ ಕೆಂಗೇರಿಯಿಂದ ಮಂಡ್ಯ ನಗರದ ಗಡಿಯವರೆಗೆ ಕೆಲಸ ಬಹುತೇಕ ಮುಗಿದಿದೆ. ಮಂಡ್ಯದಿಂದ ಮೈಸೂರುವರೆಗೆ ಕಾಮಗಾರಿ ವೇಗ ಪಡೆದುಕೊಂಡಿದೆ. ಹೀಗಾಗಿ ಸಚಿವ ನಿತಿನ್ ಗಡ್ಕರಿ ದಶಪಥ ಹೆದ್ದಾರಿಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.