ಮೈಸೂರು:ರಾಜ್ಯದ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೇ ಒಕ್ಕಲಿಗರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಗರದ ಬಂದಂತಮ್ಮ ಕಾಳಮ್ಮ ದೇವಾಲಯದಲ್ಲಿ ಆದಿ ಚುಂಚನಗಿರಿ ಶಾಖಾಮಠದ ಶ್ರೀ ಸೋಮನಾಥ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟಿಸಿದ ಒಕ್ಕಲಿಗ ಸಮುದಾಯದ ಮುಖಂಡರು ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಈ ವೇಳೆ ಒಕ್ಕಲಿಗ ಮುಖಂಡ ಮೋಹನ್ ಕುಮಾರ್ ಗೌಡ ಮಾತನಾಡಿ, ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ 130 ಸ್ಥಾನ ಗಳಿಸಲು ಬಹಳ ಹೋರಾಟ ನಡೆಸಿದ್ದಾರೆ. ಪಕ್ಷದಲ್ಲಿ ಕಿರಿಯರು ಹಾಗೂ ಹಿರಿಯರು ಇಬ್ಬರನ್ನೂ ಒಮ್ಮತದಿಂದ ಕರೆದೊಯ್ಯುವಲ್ಲಿ ಅವರ ಪಾತ್ರ ಹೆಚ್ಚಿದೆ. ಹೀಗಾಗಿ ಪಕ್ಷ ಸಂಘಟನೆಗಾಗಿ ಇಷ್ಟೊಂದು ಶ್ರಮ ವಹಿಸಿರುವ ಅವರಿಗೆ ಸಿಎಂ ಸ್ಥಾನ ನೀಡಬೇಕೆಂಬುದು ಸಮುದಾಯದ ಕೂಗಾಗಿದೆ ಎಂದು ಹೇಳಿದರು.
ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ ಮಾತನಾಡಿ, ಪಕ್ಷಕ್ಕಾಗಿ ಡಿಕೆ ಶಿವಕುಮಾರ್ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿದ್ದಾಗ ಪಕ್ಷವನ್ನು ಮುನ್ನಡೆಸಿ ಈ ಹಂತಕ್ಕೆ ತಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಪಕ್ಷ ಬಲಿಷ್ಠಗೊಳಿಸುವಲ್ಲಿಯೂ ಅವರದೇ ಪಾಲು ಹೆಚ್ಚಿದೆ. ಇದೆಲ್ಲಾ ಕಾರಣ ಪರಿಗಣಿಸಿ ಪಕ್ಷ ಅವರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ