ಮಂಡ್ಯ:ಮದ್ದೂರು ತಾಲೂಕಿನ ಹನಕೆರೆ ಗ್ರಾಮದಲ್ಲಿ ಬಳಿ ಅಂಡರ್ ಪಾಸ್ ನಿರ್ಮಿಸಬೇಕು ಎಂದು ಒತ್ತಾಯಿಸಿ ಸುತ್ತಮುತ್ತಲಿನ ಗ್ರಾಮಸ್ಥರು, ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಹೆದ್ದಾರಿಯ ಎರಡು ಕಡೆಗಳಲ್ಲಿ ಎತ್ತಿನಗಾಡಿಗಳು, ನೇಗಿಲು ಮತ್ತು ಜಾನುವಾರುಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದ ಕಾರಣ 2 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಕೆಳಸೇತುವೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿ ಪತ್ರ ಕೊಡಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದರು. ಈ ವೇಳೆ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಕೆಳಸೇತುವೆ ನಿರ್ಮಾಣಕ್ಕೆ ಈ ಹಿಂದೆ ಪ್ರಾಧಿಕಾರಕ್ಕೆ ಸಲ್ಲಿಸಿದ ಪತ್ರ ತೋರಿಸಿದರು. ಪತ್ರವನ್ನು ಕಿತ್ತುಕೊಂಡ ಪ್ರತಿಭಟನಾಕಾರರು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸುತ್ತಮುತ್ತಲಿನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಕೆಳಸೇತುವೆ ನಿರ್ಮಿಸಿಲ್ಲ. ತಕ್ಷಣವೇ ನಮ್ಮ ಗ್ರಾಮದ ಬಳಿಯೇ ಕೆಳಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು, ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಎಷ್ಟೇ ಪ್ರಯತ್ನ ಪಟ್ಟರು ಕಿವಿಗೊಡದ ಜನರು ಹೋರಾಟ ಮುಂದುವರೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಂಡ್ಯ ಎಸ್ಪಿ ಎನ್ ಯತೀಶ್, ಪ್ರತಿಭಟನಾಕಾರರಿಗೆ ರಸ್ತೆ ತಡೆ ನಿಲ್ಲಿಸುವಂತೆ ಮನವಿ ಮಾಡಿದರು. ಮಾತು ಕೆಳದ ಪ್ರತಿಭಟನಕಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ರೈತ ಮುಖಂಡರಾದ ಮಧುಚಂದನ್ ಹಾಗೂ ಪ್ರಸನ್ನ ಗೌಡರನ್ನ ವಶಕ್ಕೆ ಪಡೆದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.