ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಯಾರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವಿಚಾರ ಹಾಗೂ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುವುದು ಖಚಿತ" ಎಂದರು.
ಸುಪ್ರೀಂ ಕೋರ್ಟ್ನಿಂದ ತಾತ್ಕಾಲಿಕ ತೀರ್ಪು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಮತ್ತು ಶಾಸಕರ ಅಸಮಾಧಾನದ ಬಗ್ಗೆ ನಮಗೆ ತಿಳಿದಿದೆ. ನಮ್ಮ ರಾಜ್ಯದವರು ಕೇಂದ್ರದ ಕಮಿಟಿ ಮುಂದೆ ಸಮ್ಮತವಾಗಿ ವಾದ ಮಂಡಿಸಿದ್ದಾರೆ. ಆದರೆ, ತಮಿಳುನಾಡಿನವರು ಸಭೆಯಿಂದ ಹೊರ ನಡೆದಿದ್ದು. ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರನ್ನು ಬಿಡುವಂತೆ ಕೇಳಿದ್ದಾರೆ. ಇದಕ್ಕೆ ನಾವು ಒಪ್ಪದ ಕಾರಣ ಅವರು ಸಭೆಯಿಂದ ಹೊರ ನಡೆದಿದ್ದಾರೆ. ಇಂದು ಸುಪ್ರೀಂ ಕೋರ್ಟ್ನಿಂದ ತಾತ್ಕಾಲಿಕ ತೀರ್ಪು ಬರಲಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ರಾಜ್ಯದ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಬೆಳೆಗಳಿಗೆ 15 ದಿನಗಳಿಗೊಮ್ಮೆ ನೀರು ಬಿಡುತ್ತೇವೆ. ಸದ್ಯಕ್ಕೆ ತಮಿಳುನಾಡಿಗೆ ಕೇಂದ್ರದ ತೀರ್ಮಾನದಂತೆ ನಿತ್ಯವೂ ನೀರು ಹರಿಸುತ್ತಿದ್ದೇವೆ ಎಂದು ಹೇಳಿದರು.