ಮೈಸೂರು:ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿಯಾಗಿ ಏರ್ಪಡಿಸಿದ್ದ ಕೈಗಾರಿಕಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಐಎಸ್‍ಎಂಸಿ ಕಂಪನಿಯು ಸುಮಾರು 23 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಸೆಮಿಕಂಡಕ್ಟರ್ ಪ್ಯಾಬ್ ಸ್ಥಾಪಿಸಲು ರಾಜ್ಯಸರ್ಕಾರೊಂದಿಗೆ ಎಂಒಯುಗೆ ಸಹಿ ಹಾಕಿದೆ. ಇದರಿಂದ ಈ ಭಾಗದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಸಾಕಷ್ಟು ಕೈಗಾರಿಕೆಗಳು ಸ್ಥಾಪನೆಯಾಗಿರುವುದರಿಂದ ನಮ್ಮ ಸರ್ಕಾರ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚು ಒತ್ತು ಕೊಡುತ್ತಿದೆ. ಮೈಸೂರು ಕೂಡ ನಮ್ಮ ಆದ್ಯತೆಯ ನಗರಗಳಲ್ಲಿ ಒಂದಾಗಿದೆ ಎಂದು ನಿರಾಣಿ ಹೇಳಿದರು.
ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇತ್ತೀಚೆಗೆ ದಾವೋಸ್, ಅಮೆರಿಕ ಹಾಗೂ ಜಪಾನ್‍ಗೆ ಭೇಟಿ ನೀಡಿದ ವೇಳೆ ವಿಶ್ವದ ಮುಂಚೂಣಿಯಲ್ಲಿರುವ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಲು ಆಹ್ವಾನ ನೀಡಿದ್ದೇವೆ, ಅನೇಕರು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.