ಮೈಸೂರು:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬುಧವಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಆಯ್ಕೆಯ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ. ಒಂದು ವೇಳೆ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡಿದರೆ, ಅದು ಯಡಿಯೂರಪ್ಪನವರ ಮಗ ವಿಜಯೇಂದ್ರ ಎಂಬ ಕಾರಣಕ್ಕಾಗಿ ಅಲ್ಲ. ಯಾರನ್ನು ರಾಜ್ಯಾಧ್ಯಕ್ಷನಾಗಿ ಮಾಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಡಿಯೂರಪ್ಪನವರು ತಮ್ಮ ಮಗನ ಪರವಾಗಿ ಲಾಬಿ ಮಾಡುತ್ತಿದ್ದಾರೆ ಎಂಬುದೆಲ್ಲ ಸುಳ್ಳು. ಯಾರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದರೂ, ಯಾರನ್ನು ಪ್ರತಿಪಕ್ಷದ ನಾಯಕನಾಗಿ ಮಾಡಿದರೂ ಎಲ್ಲರನ್ನೂ ಒಪ್ಪಿಕೊಂಡೇ ಕೆಲಸ ಮಾಡಬೇಕು. ಇವತ್ತಿನ ಸುತ್ತೂರು ಮಠದ ಭೇಟಿಗೂ, ರಾಜ್ಯಾಧ್ಯಕ್ಷನ ನೇಮಕಕ್ಕೂ ಸಂಬಂಧವಿಲ್ಲ ಎಂದು ಇದೇ ವೇಳೆ ತಿಳಿಸಿದರು.