ಮೈಸೂರು: ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಯು ದಲಿತರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಧಾನ ಮಂತ್ರಿಯವರ ದೂರದೃಷ್ಟಿಯಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಜಾರಿಗಾಗಿ ಎಲ್ಲ ರಾಜ್ಯಗಳು ತಮಗೆ ಒದಗಿಸಲಾಗಿರುವ ಅನುದಾನವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡು ವರ್ಗದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವರಾದ ಎ. ನಾರಾಯಣ ಸ್ವಾಮಿ ತಿಳಿಸಿದರು.
ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ವತಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಹಾಗೂ ಸಂಬಂಧಪಟ್ಟ ನಿಯಮ ಹಾಗೂ ಅಧಿನಿಯಮಗಳ ಬಗ್ಗೆ ನಗರದ ಲಲಿತ ಮಹಲ್‌ನಲ್ಲಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು. ದೀನದಲಿತ ಸಮುದಾಯಕ್ಕಾಗಿ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುವುದು ನಮ್ಮ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕರ್ತವ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಚಯಿಸಿದ ಸಾಕಷ್ಟು ಕೌಶಲ್ಯ ಕಾರ್ಯಕ್ರಮಗಳನ್ನು ನಾವು ಹೊಂದಿದ್ದೇವೆ.
ಅವರ ದೃಷ್ಟಿಕೋನವು ಎಲ್ಲ ರಾಜ್ಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮಂತ್ರವಾಗಿರಬೇಕು, ಇದಕ್ಕಾಗಿ ರಾಜ್ಯಗಳಿಗೆ ಮೀಸಲಾದ ಹಣವನ್ನು ಸಂಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಬೇಕು. ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಮಹಿಳೆಯರ ಸಬಲೀಕರಣ ಮತ್ತು ಉನ್ನತಿಗಾಗಿ ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸ್ಟಾರ್ಟ್ ಅಪ್ ಇಂಡಿಯಾ, ಸ್ಟ್ಯಾಂಡ್-ಅಪ್ ಯೋಜನೆ, ಸ್ಕಿಲ್ ಇಂಡಿಯಾ ಮತ್ತು ಸ್ವಾನಿಧಿ ಮುಂತಾದ ಅನೇಕ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಹೇಳಿದರು.
ಸಮುದಾಯಗಳ ಕಲ್ಯಾಣಕ್ಕಾಗಿ ನಿಗಮಗಳ ಸ್ಥಾಪನೆ: ಕರ್ನಾಟಕ ಸರ್ಕಾರವು ಎಸ್‌ಸಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ನಿಗದಿಪಡಿಸಿದೆ. ಇದು ಎಲ್ಲ ರಾಜ್ಯಗಳಿಗೆ ಮಾದರಿಯಾಗಬೇಕು ಮತ್ತು ಅಂತಹ ಉತ್ತಮ ಅಭ್ಯಾಸವನ್ನು ಅವರು ಅಳವಡಿಸಿಕೊಳ್ಳಬೇಕು. ಮಹಿಳೆಯರ ಸಬಲೀಕರಣಕ್ಕಾಗಿ ಕೇರಳದ ಕುಟುಂಬಶ್ರೀ ಯೋಜನೆ ಕೂಡ ಉತ್ತಮ ಉದಾಹರಣೆಯಾಗಿದೆ. ಕರ್ನಾಟಕದಲ್ಲಿ ಚಮ್ಮಾರರಿಗೆ ಉಚಿತ ಮನೆಗಳನ್ನು ನೀಡಲಾಗುತ್ತಿದೆ ಮತ್ತು ಅದರಲ್ಲೇ ಚರ್ಮದ ಉತ್ಪನ್ನಗಳನ್ನು ತಯಾರಿಸಲು ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ವಿವಿಧ ಸಮುದಾಯಗಳ ಕಲ್ಯಾಣ ಮತ್ತು ಉನ್ನತಿಗಾಗಿ ಅನೇಕ ವಿಶೇಷ ನಿಗಮಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.