ಮೈಸೂರು: ವರುಣ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗಲಾಟೆ ನಡೆದಿದೆ. ಈ ವೇಳೆ ಕಲ್ಲು ತೂರಾಟವಾಗಿದ್ದು, ಬಿಜೆಪಿ ಕಾರ್ಯಕರ್ತ ನಾಗೇಶ್ ಎಂಬಾತ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋದರನ ಮನೆ ಎದುರು ಗುರುವಾರ ರಾತ್ರಿ 8 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ವರುಣ ಕ್ಷೇತ್ರದಲ್ಲಿ ಸಂಸದ ಪ್ರತಾಪ ಅವರೊಂದಿಗೆ ಸೋಮಣ್ಣ ಅವರು, ತಮ್ಮ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ರಥದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ಸೋದರನ ಮನೆ ಎದುರು ಸಾಗುತ್ತಿದ್ದಾಗ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿಯ ವಕ್ತಾರ ವಸಂತ್ ಕುಮಾರ್ ಆರೋಪಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರಿದ್ದ ವಾಹನ ಸಿದ್ದರಾಮಯ್ಯ ಅವರ ಅಣ್ಣನ ಮನೆ ಸಮೀಪ ಬರುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿತ ಯುವಕರ ಗುಂಪೊಂದು ಸಿದ್ದರಾಮಯ್ಯ ಪರ ಘೋಷಣೆ ಕೂಗಿತ್ತು. ಮತ್ತೊಂದು ಗುಂಪು ಸೋಮಣ್ಣ ಪರ ಘೋಷಣೆ ಕೂಗಿತ್ತು. ಆಗ, ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಕೆಲವರು ನಾಗೇಶ್ ಮೇಲೆ ಹಲ್ಲೆ ಮಾಡಿದರು. ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ತಿಳಿಯಾಗಿಸಿದರು. ನಂತರ ಪೊಲೀಸ್ ಬಂದೋಬಸ್ತ್‌ನಲ್ಲಿ ಬಿಜೆಪಿ ಪ್ರಚಾರ ವಾಹನ ಸಾಗಿದೆ. ಗಲಾಟೆ ಬಳಿಕವೂ ಸಹ ಸೋಮಣ್ಣ ಅವರು ತಮ್ಮ ಬೆಂಬಲಿಗರೊಂದಿಗೆ ಚುನಾವಣಾ ಪ್ರಚಾರ ಕಾರ್ಯ ಮುಂದುವರೆಸಿ ಬೇರೆ ಗ್ರಾಮಗಳಲ್ಲಿ ಪ್ರಚಾರ ನಡೆಸಿದ್ದರು. ಈ ಸಂಬಂಧ ಬಿಜೆಪಿಯ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.