ಮೈಸೂರು: ಪಕ್ಷ ಒಪ್ಪಿದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ನಿಭಾಯಿಸುತ್ತೇನೆ ಎಂದರು.
ಸ್ಪರ್ಧೆಯಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಎಲ್ಲಾ ಸವಾಲುಗಳನ್ನು ನಾನು ಎದುರಿಸುತ್ತೇನೆ. ನಾನು ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಹೀಗಾಗಿ ಇಲ್ಲಿ ಸಂಘಟನೆ ಹೆಚ್ಚು ಮಾಡಿದ್ದೇವೆ ಎಂದರು.