ಮೈಸೂರು: ಕೊರೊನಾ ನಾಲ್ಕನೇ ಅಲೆ ಭೀತಿಯಿಂದಾಗಿ ಮೈಸೂರಿನಲ್ಲಿ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಜೂನ್ ತಿಂಗಳಿನಲ್ಲಿ ನಾಲ್ಕನೇ ಅಲೆ ಪ್ರಾರಂಭವಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಆರ್ಟಿ-ಪಿಸಿಆರ್ ಹಾಗೂ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ ಪ್ರಮಾಣವನ್ನು ಹೆಚ್ಚಿಸಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆ, ಕೆ.ಆರ್. ಆಸ್ಪತ್ರೆ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ.
ಖಾಸಗಿ ಆಸ್ಪತ್ರೆಗಳಲ್ಲಿಯೂ ಶ್ವಾಸಕೋಶದ ತೊಂದರೆ ಇರುವ ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ತಿಳಿಸಿದರು. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ 1,800 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 9 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಒಂಬತ್ತು ಮಂದಿ ಕೂಡ ಹೊರರಾಜ್ಯದಿಂದ ಬಂದವರಾಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಪ್ರತಿನಿತ್ಯ 200 ರಿಂದ 250 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.