ಮೈಸೂರು:ಕೇರಳದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ರಾಜ್ಯದ ಕಬಿನಿ ಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಸಿರು ನಿಶಾನೆ ತೋರಿಸಿ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ರು.
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರತಿಕ್ರಿಯೆ ಈಗಾಗಲೇ ಕಬಿನಿ ಅಧಿಕಾರಿಗಳ ಜೊತೆಗೆ ಸಭೆ ಮಾಡಲಾಗಿದೆ ಎಂದರು. ವೈಯನಾಡು ಅಧಿಕಾರಿಗಳ ಜೊತೆ ನೀರಾವರಿ ಅಧಿಕಾರಿಗಳು ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಾಲೆಗಳಿಗೆ ನೀರನ್ನು ಬಿಡಲಾಗಿದೆ. ನದಿಗೂ ಕೂಡ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವುದು ನಿಜ. ಈಗ ಪಾಸಿಟಿವ್ ರೇಟ್ 2ಕ್ಕೆ ಇಳಿದಿದೆ. ಆದರೆ ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದರು.
ಸರ್ಕಾರದ ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಮೂರನೇ ಅಲೆಗೂ ಬರುವ ಮುನ್ನ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಕೋವಿಡ್ ಮಿತ್ರಗಳ ಕಾರ್ಯ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದರು.