ಮೈಸೂರು: ಜಿಲ್ಲಾಸ್ಪತ್ರೆಯಲ್ಲಿ ಕೈಗೊಳ್ಳಲಾಗಿದ್ದ 3ನೇ ಹಂತದ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಡಿಸಿ ರೋಹಿಣಿ ಸಿಂಧೂರಿ ಅವರು ಚಾಲನೆ ನೀಡಿದರು.
ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನವು ಮೊದಲ ಹಂತದಲ್ಲಿ ಶೇ 90 ಹಾಗೂ 2ನೇ ಹಂತದಲ್ಲಿ ಶೇ 50ರಷ್ಟು ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‍ಗಳು, 2ನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತೆಯರಿಗೆ ಲಸಿಕೆ ಕೊಡಲಾಗಿದೆ. ಇಂದು 3ನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಜಿಲ್ಲೆಯಲ್ಲಿ ಒಟ್ಟು ನಾಲ್ಕುವರೆ ಲಕ್ಷ ಮಂದಿ ಹಿರಿಯ ನಾಗರಿಕರಿಗೆ ಲಸಿಕೆ ನೀಡುವ ಗುರಿ ಇದೆ ಎಂದರು.
ಬೇಡಿಕೆಗೆ ಅನುಗುಣವಾಗಿ ನಿರ್ದಿಷ್ಟ ಆಸ್ಪತ್ರೆಗಳಲ್ಲಿ ಲಸಿಕೆ ಕೊಡಲಾಗುವುದು. ಮೊದಲ ಲಸಿಕೆ ಪಡೆದ 28 ದಿನಗಳ ನಂತರ 2ನೇ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಇದುವರೆಗೂ ಲಸಿಕೆ ಪಡೆಯದವರಿಗೆ ಈಗ ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆಯಲು ಇಚ್ಛಿಸುವ ಮಂದಿ ನೇರವಾಗಿ ಜಿಲ್ಲಾಸ್ಪತ್ರೆಯಲ್ಲಿ ಹೆಸರು ನೋಂದಾಯಿಸಿಕೊಂಡರೆ ಸಾಕು, ಸಾರ್ವಜನಿಕರಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.