ಮೈಸೂರು: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಜನ ಮತ್ತು ಜಾನುವಾರುಗಳ ರಕ್ಷಣೆಗೆ ತಕ್ಷಣವೇ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರವಾಹ ಮತ್ತು ಕೋವಿಡ್ ಹಿನ್ನೆಲೆ ವಿಕೋಪ ನಿರ್ವಹಣೆ ಕುರಿತು ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ತಾಲೂಕು ಟಾಸ್ಕ್ ಫೋರ್ಸ್ ಅಧಿಕಾರಿಗಳ ಪ್ರಗತಿ ಪರಿಶೀಲನೆ ಮಾಡಿ, ಮುಂದಿನ ಒಂದೆರೆಡು ವಾರಗಳ ಕಾಲ ಹೆಚ್ಚಿನ ಮಳೆಯಾಗುವ ಮಾಹಿತಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಬಹುದು. ಅಲ್ಲಿಯವರೆಗೂ ಕಾಯುವ ಬದಲು ಈಗಲೇ ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿಯಲ್ಲಿ ಉನ್ನತ ಅಧಿಕಾರಿಗಳ ಸಭೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಎಲ್ಲಾ ತಾಲೂಕುಗಳಿಗೂ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಅವರು ಆಗಾಗ್ಗೆ ತಾಲೂಕುಗಳಿಗೆ ಭೇಟಿ ನೀಡಿ, ನಿರ್ವಹಣೆ ಮಾಡಬೇಕು ಎಂದಿದ್ದಾರೆ.
ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಜನರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಬೇಕು. ಜಾನುವಾರುಗಳಿಗೆ ಗೋಶಾಲೆಗಳನ್ನು ಮಾಡಬೇಕು. ಹಾಲುಣಿಸುವ ಹಸುಗಳಿದ್ದರೆ ದೂರದಲ್ಲಿ ಗೋಶಾಲೆ ಮಾಡುವುದರಿಂದ ಸಮಸ್ಯೆಯಾಗುತ್ತದೆ. ಹಾಗಾಗಿ ಗ್ರಾಮದ ಹತ್ತಿರವೇ ಗೋಶಾಲೆ ಮಾಡಿ ಎಂದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮುನ್ನೆಚ್ಚರಿಕೆಯಾಗಿ ಎಲ್ಲಾ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಅಲ್ಲದೆ ಆಗಸ್ಟ್ 1ರಿಂದ ಈವರೆಗೆ ಜಿಲ್ಲೆಯಲ್ಲಿ 66 ಮನೆಗಳಿಗೆ ಹಾನಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್, ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥಸ್ವಾಮಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.