ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಖಾಲಿ ಬಿಂದಿಗೆ ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿತು.
ಮಳೆಬಾರದೆ ಬರಗಾಲದಿಂದ ಕೊಳವೆ ಬಾವಿಗಳು ಬತ್ತಿ ಹೋಗುತ್ತಿದ್ದು, ಕಬ್ಬಿನ ಬೆಳೆ ಒಣಗುವಂತಾಗಿದೆ. ಸಕ್ಕರೆ ಕಾರ್ಖಾನೆ ಜೊತೆ ಒಪ್ಪಂದ ಮಾಡಿಕೊಂಡಿರುವ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ತುರ್ತಾಗಿ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಅರೆಸುವ ಕಾರ್ಯ ಆರಂಭ ಮಾಡಬೇಕು ಎಂದು ಆಗ್ರಹಿಸಿದರು.
ಹೊಸಸಾಲ ಪಡೆಯಲು ರೈತರು ಸಹಕಾರ ಸಂಘಗಳಿಗೆ ಜಮೀನು ಅಡಮಾನ ನೋಂದಣಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕಾರಣ ರೈತರು ವಾರಗಟ್ಟಲೆ ಸಾವಿರಾರು ರೂಪಾಯಿ ಖರ್ಚು ಮಾಡಿ ನೋಂದಣಿ ಕಚೇರಿಗೆ ಅಲೆಯುವಂತಾಗಿದೆ. ಈ ನೀತಿಯನ್ನು ತಕ್ಷಣದಿಂದಲ್ಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.
ಕಬಿನಿ-ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲ ನಾಲೆಗಳಲ್ಲಿ ತುರ್ತಾಗಿ ಹೂಳು ತೆಗೆಸಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವಂತಾಗಬೇಕು. ಫಸಲ್ ಭೀಮಾ ಬೆಳೆ ವಿಮೆ ಯೋಜನೆಯನ್ನು ತಿದ್ದುಪಡಿ ಮಾಡಿ ಎಲ್ಲ ಬೆಳೆಗಳಿಗೂ ಅನ್ವಯವಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.