ಮೈಸೂರು:ಡಾ. ರಾಜ್ಕುಮಾರ್ ಕಾಲದಿಂದಲೂ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಸುಮಾರು 110 ಎಕರೆ ಜಮೀನನ್ನು ಸರ್ಕಾರ ಖರೀದಿಸಿದ್ದು, ಶೀಘ್ರದಲ್ಲೇ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ ಎಂದು ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಕೊರೊನಾದಿಂದಾಗಿ ಕನ್ನಡ ಚಿತ್ರರಂಗವು ಸಾಕಷ್ಟು ಸಮಸ್ಯೆ ಎದುರಿಸುತ್ತಿರುವುದರ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಶಿವರಾಜ್ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿತ್ತು. ಆದರೆ ಸರ್ಕಾರದಿಂದ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಇಂದು ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವರಾದ ಸಿ.ಸಿ.ಪಾಟೀಲ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ, ಕೆ.ಸಿ.ಎನ್.ಚಂದ್ರಶೇಖರ್ ಹಾಗೂ ಸಾ.ರಾ.ಗೋವಿಂದು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಚಿತ್ರರಂಗದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.