ಮೈಸೂರು: ಚಾಮರಾಜನಗರ ಜಿಲ್ಲೆಯ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ (62) ಅವರು ವಿಧಿವಶರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದ ಅವರು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅವರಿಗೆ ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ.
ಸರಳ ಹಾಗೂ ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದ ಧ್ರುವನಾರಾಯಣ್, ಎರಡು ಬಾರಿ ಚಾಮರಾಜನಗರ ಜಿಲ್ಲೆಯ ಸಂಸದರಾಗಿ ಹಾಗೂ ಶಾಸಕರಾಗಿಯೂ ಸಹ ಆಯ್ಕೆಯಾಗಿದ್ದರು. ಸದ್ಯ ಅವರು ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದರು.
ಈ ಬಾರಿ ನಂಜನಗೂಡು ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಕೆಲಸದಲ್ಲಿ ಸಕ್ರಿಯರಾಗಿದ್ದ ಧ್ರುವನಾರಾಯಣ್ ಅವರ ಅಕಾಲಿಕ ಸಾವು ಪಕ್ಷಕ್ಕೆ ನಷ್ಟ ಉಂಟು ಮಾಡಿದೆ. ಅವರ ಸಾವಿಗೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಂಗ್ರೆಸ್ ನಾಯಕರು, ಅಭಿಮಾನಿಗಳಿಂದ ಕಂಬನಿ.. ಅವರ ಸಾವಿನ ಸುದ್ದಿ ತಿಳಿದು ಕಾಂಗ್ರೆಸ್ ನಾಯಕರು, ರಾಜಕಾರಣಿಗಳು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ರಾಹುಲ್ ಗಾಂಧಿ-ಮಲ್ಲಿಕಾರ್ಜುನ ಖರ್ಗೆ ಟ್ವೀಟ್: ಮಾಜಿ ಸಂಸದ ಆರ್ ಧ್ರುವನಾರಾಯಣ್ ಅವರ ಹಠಾತ್ ನಿಧನದಿಂದ ಬಹಳ ದುಃಖವಾಗಿದೆ. ಪಕ್ಷಕ್ಕಾಗಿ ತಳಮಟ್ಟದಿಂದ ಸಾಕಷ್ಟು ದುಡಿದಿದ್ದರು. ಜನ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಎನ್ಎಸ್ಯುಐ ಮತ್ತು ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯೂ ಆಗಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಆರ್ ಧ್ರುವನಾರಾಯಣ ಅವರ ನಿಧನದಿಂದ ತೀವ್ರ ದುಃಖ ಮತ್ತು ನೋವಾಗಿದೆ. ಅವರು ಕೇವಲ ತಳಮಟ್ಟದ ರಾಜಕೀಯ ವ್ಯಕ್ತಿಯಾಗಿರಲಿಲ್ಲ. ಎಲ್ಲ ಸಮೂದಾಯದ ವ್ಯಕ್ತಿಯಾಗಿದ್ದರು. ಅವರ ನಿಧನ ಕೇವಲ ಪಕ್ಷಕ್ಕಲ್ಲ, ವೈಯಕ್ತಿಕವಾಗಿ ನನಗೂ ಸಹ ತುಂಬಲಾರದ ನಷ್ಟ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಕಂಬನಿ.. ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ಗುರುತಿಸಿಕೊಡಿದ್ದ ಆರ್ ಧ್ರುವನಾರಾಯಣ್ ಅವರ ಸಾವು ಆಘಾತ ತಂದಿದೆ. ಈ ಕುರಿತು ಟ್ವಿಟ್ ಮಾಡಿಕೊಂಡಿರುವ ಸಿದ್ದರಾಮಯ್ಯ ಅವರು,' ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.' ಎಂದು ಬರೆದುಕೊಂಡಿದ್ದಾರೆ.
ರಾಜಕೀಯ ಹಾದಿ ಸ್ಮರಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ.. 'ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ'. ಎಂದು ಸಿದ್ದರಾಮಯ್ಯ ಅವರು ಧ್ರುವ ನಾರಾಯಣ್ ಅವರ ರಾಜಕೀಯ ಹಾದಿಯನ್ನು ಸ್ಮರಿಸಿದ್ದಾರೆ.
ಸಿಎಂ ಬೊಮ್ಮಾಯಿ ಸಂತಾಪ:ಮಾಜಿ ಸಂಸದರು ಹಾಗೂ ಕೆಪಿಸಿಸಿಯ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಸಂತಾಪ.. ಬಿಜೆಪಿಯ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇಂತಹ ಒಳ್ಳೆಯ ವ್ಯಕ್ತಿಯನ್ನೂ ಕಿತ್ತುಕೊಂಡಿಯಲ್ಲಾ ದೇವರೇ.. ಓಂ ಶಾಂತಿ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬಿಎಸ್ವೈ ಸಂತಾಪ:ಜನಪ್ರಿಯ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಇಂದು ಹಠಾತ್ ನಿಧನರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಹೆಚ್ಡಿಡಿ-ಹೆಚ್ಡಿಕೆ ಟ್ವೀಟ್: ರಾಜ್ಯ ಕಾಂಗ್ರೆಸ್ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ. ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರೈತ ಸಂಘ ಸಂತಾಪ:ಸಜ್ಜನ, ಜನಪರ, ಕ್ರಿಯಾಶೀಲ ರಾಜಕಾರಣಿ ಆರ್. ಧ್ರುವನಾರಾಯಣ್ ಅವರ ಸಾವು ಸಮಾಜಕ್ಕೆ ಮತ್ತು ಜನ ಕಾಳಜಿಯ ರಾಜಕಾರಣಕ್ಕೆ ತುಂಬಲಾರದ ನಷ್ಟ ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷರು ಬಡಗಲಪುರ ನಾಗೇಂದ್ರ ಸಂತಾಪ ಸೂಚಿಸಿದ್ದಾರೆ.
ದೃವನಾರಾಯಣ್ ಅವರ ಸಂಕ್ಷಿಪ್ತ ವಿವರ:ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (62) ಅವರು 1961 ರ ಜುಲೈ 31 ರಂದು ಈಗಿನ ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ ಜನಿಸಿದ್ದರು. ಕೃಷಿ ಪದವೀಧರರಾಗಿದ್ದ ಇವರು ಕಳೆದ ಎರಡು ವರ್ಷಗಳಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ, ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದರು.
1983 ರಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದ ಧ್ರುವನಾರಾಯಣ್, 1984 ಎನ್ಎಸ್ಯುಐ ಅಧ್ಯಕ್ಷರಾಗಿದ್ದರು. 1986 ರಲ್ಲಿ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಆಗಿದ್ದರು. 1999 ರಲ್ಲಿ ಮೊದಲ ಬಾರಿಗೆ ಸಂತೆಮರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಅದಾದ ನಂತರ 2004 ರಲ್ಲಿ ಮತ್ತೆ ವಿಧಾನಸಭೆಗೆ ಸ್ಪರ್ಧಿಸಿ, ಒಂದು ಮತದಿಂದ ಗೆಲುವು ಸಾಧಿಸಿದ್ದರು. 2008ರಲ್ಲಿ ರಲ್ಲಿ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಆನಂತರ 2009 ಮತ್ತು 2014 ರಲ್ಲಿ ಲೋಕಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತ, ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಪ್ರಜಾಧ್ವನಿ ಯಾತ್ರೆ ರದ್ದು:ದಾವಣಗೆರೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಪ್ರಜಾಧ್ವನಿ ಯಾತ್ರೆ ಏರ್ಪಡಿಸಲಾಗಿತ್ತು. ಆದರೆ, ಅವರ ನಿಧನದ ಹಿನ್ನೆಲೆಯಲ್ಲಿ ಯಾತ್ರೆಯನ್ನು ರದ್ದುಗೊಳಿಸಲಾಗಿದ್ದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇತ್ತ ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಜಾಧ್ವನಿ ಯಾತ್ರೆ ಕೂಡ ಮುಂದೂಡಲಾಗಿದೆ.