ಮೈಸೂರು: ನಂಜನಗೂಡು ತಾಲೂಕೊಂದರ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಅಪ್ರಾಪ್ತೆಯನ್ನು ಮದುವೆಯಾದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಂಚಾಯಿತಿ ಅಧ್ಯಕ್ಷನ ವಿರುದ್ಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ರೈತ ಸಂಘದ ಉಪಾಧ್ಯಕ್ಷ ಮಹೇಶ್ ಸೇರಿದಂತೆ ಗ್ರಾಮದ ಪ್ರಮುಖರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕವಿತಾ ಮುಂದಿನ ಕ್ರಮ ಜರುಗಿಸಿದ್ದಾರೆ.
ಗ್ರಾ.ಪಂ ಅಧ್ಯಕ್ಷ ನಂಜನಗೂಡು ತಾಲೂಕಿನ ಮತ್ತೊಂದು ಗ್ರಾಮದ ಬಾಲಕಿಯನ್ನು 2023ರ ಫೆಬ್ರವರಿ 15ರಂದು ನಂಜನಗೂಡಿನ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯಾಗಿದ್ದಾರೆ. ಶಾಲಾ ದಾಖಲಾತಿ ಪ್ರಕಾರ ಬಾಲಕಿಯ ಜನ್ಮ ದಿನಾಂಕ 2005ರ ಮೇ 19 ಆಗಿದೆ. ಆಕೆಗೆ ಇನ್ನೂ 18 ವರ್ಷ ತುಂಬಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.