ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಜೀವರಸಾಯನಶಾಸ್ತ್ರ ವಿಭಾಗದ ಗೌರವ ಪ್ರಾಧ್ಯಾಪಕ, ಪದ್ಮಭೂಷಣ ಡಾ. ಗೋವಿಂದರಾಜನ್ ಪದ್ಮಗನಾಭನ್ ಹಾಗೂ ಆಕ್ಸೆಲ್ ಇಂಡಿಯಾ ಸಂಸ್ಥಾಪಕ ಪ್ರಕಾಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ ಹೇಮಂತ್ ಕುಮಾರ್ ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೆ.7ರಂದು ಮೈಸೂರು ವಿವಿಯ 101ನೇ ಘಟಿಕೋತ್ಸವ ನಡೆಯಲಿದೆ. ಅಂದು ಬೆಳಗ್ಗೆ 11ಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಿಎಸ್ ಐಆರ್ ಮಹಾನಿರ್ದೇಶಕ ಡಾ.ಶೇಖರ್ ಸಿ.ಮಂಡೆ,ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಿದ್ದಾರೆ. ಹಾಗೆ 29,852 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಒಟ್ಟಾರೆ 387 ಪದಕಗಳು(ಗೋಲ್ಡ್ ಮೆಡಲ್) ಮತ್ತು 178 ಬಹುಮಾನಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವಿವಿಧ ವಿಷಯಗಳಲ್ಲಿ 244 ವಿದ್ಯಾರ್ಥಿಗಳಿಗೆ ಪಿಹೆಚ್ ಡಿ ಪದವಿಯನ್ನು ಪ್ರದಾನ ಮಾಡಲಾಗುವುದು.