ಮೈಸೂರು :ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಕೆಳಗೆ ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ. ಇಂದು ತಮ್ಮ ವಿದ್ಯಾರಣ್ಯಪುರಂ ಮುಂಭಾಗದ ಪಾರ್ಕ್‌ನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷ ಬಿಡುವುದಿಲ್ಲ. ಪಕ್ಷೇತರನಾಗಿ ಸ್ಪರ್ಧೆ ಕೂಡ ಮಾಡುವುದಿಲ್ಲ ಎಂದು ತಮ್ಮ ನಿರ್ಧಾರ ಪ್ರಕಟಿಸಿದರು.
ಕೆ.ಆರ್.ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಮದಾಸ್‌ಗೆ ಈ ಬಾರಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಇವರ ಬದಲಿಗೆ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಟಿ.ಎಸ್.ಶ್ರೀವತ್ಸ ಅವರಿಗೆ ಟಿಕೆಟ್ ಘೋಷಿಸಿದೆ. ಇದರಿಂದ ಕಳೆದ ಎರಡು ದಿನಗಳಿಂದ ರಾಮದಾಸ್ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಡಿತ್ತು.
ಬಿಜೆಪಿ ನನಗೆ ತಾಯಿ ಇದ್ದಂತೆ: ನನಗೆ ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಯಾರ ಹೆಸರನ್ನೂ ಹೇಳುವುದಿಲ್ಲ. ಶ್ರೀವತ್ಸ ಪರ ಕೆಲಸ ಮಾಡಿ, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಬಿಜೆಪಿ ನನಗೆ ತಾಯಿ ಇದ್ದಂತೆ ಎಂದು ಹೇಳುತ್ತಾ ರಾಮದಾಸ್ ಭಾವುಕರಾದರು.