ಮೈಸೂರು : ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಚಾಮುಂಡಿ ಬೆಟ್ಟದಲ್ಲಿರುವ ದೇವಿಯ ಸನ್ನಿಧಿಯಲ್ಲಿ ಅಕ್ಟೋಬರ್ 15 ರಂದು ಬೆಳಗ್ಗೆ 10:15 ರಿಂದ 10.36 ರ ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಿನಿಮಾ ಸಾಹಿತಿ ಹಾಗೂ ಚಲನಚಿತ್ರ ಸಂಗೀತ ನಿರ್ದೇಶಕರಾದ ನಾದಬ್ರಹ್ಮ ಡಾ.ಹಂಸಲೇಖ ಅವರು 2023 ರ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಘನ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆಯಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ ಜೋಶಿ, ಕೌಶಲಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜ ಚಂದ್ರಶೇಖರ್, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ, ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಜಿ.ಟಿ ದೇವೇಗೌಡ ವಹಿಸಲಿದ್ದು, ಸಮಾರಂಭದ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಮತ್ತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್ ಸುರೇಶ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಮಹಾ ಪೌರರಾದ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅ. 23 ಮತ್ತು 24 ರಂದು ಹಲವೆಡೆ ಏಕಮುಖ ವಾಹನ ಸಂಚಾರ : ಆಯುಧ ಪೂಜೆ ಹಾಗೂ ದಸರಾ ಮೆರವಣಿಗೆ ಹಿನ್ನೆಲೆಯಲ್ಲಿ ಹಲವೆಡೆ ಅ.23 ಮತ್ತು 24 ರಂದು ಏಕಮುಖ ವಾಹನ ಸಂಚಾರದ ವ್ಯವಸ್ಥೆ ಮಾಡಲಾಗಿದೆ.
ಹಳೆ ಮೈಸೂರು-ಬೆಂಗಳೂರು ರಸ್ತೆಯ ಅಂಕ್ ರಸ್ತೆ ಜಂಕ್ಷನ್‌ನಿಂದ ರಾಜೇಂದ್ರನಗರ ರಸ್ತೆ, ಶಿವಾಜಿ ರಸ್ತೆ ಮಾರ್ಗವಾಗಿ ಡಾ.ರಾಜಕುಮಾರ್ ವೃತ್ತದ ವರೆಗೆ: ಅಂಕ್ ರಸ್ತೆಯ ಹಳೆ ಬೆಂಗಳೂರು - ಮೈಸೂರು ರಸ್ತೆ ಮಾರ್ಗವಾಗಿ ಬರುವ ವಾಹನಗಳು ಜಂಕ್ಷನ್ಲ್ಲಿ ಎಡ ತಿರುವು ಪಡೆದು ಮೌಲಾನಾ ಅಬ್ದುಲ್ ಕಲಾಂ ಆಜಾದ್ ವೃತ್ತ, ರಾಜೇಂದ್ರನಗರ ಮುಖ್ಯ ರಸ್ತೆ, ಡಾ. ರಾಜಕುಮಾರ್ ವೃತ್ತದವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಗೂ ಸದರಿ ಮಾರ್ಗದಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುವ ಎಲ್ಲಾ ವಾಹನಗಳ ಸಂಚಾರವನ್ನು ಅ. 23 ಮತ್ತು ಅ.24 ರಂದು ನಿರ್ಬಂಧಿಸಲಾಗಿದೆ.