ಮೈಸೂರು: ಕೋವಿಡ್ ಅಲೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದ್ದು ಸರಳ ದಸರಾವನ್ನು ಮತ್ತೆ ವಿಜೃಂಭಣೆಯಿಂದ ನಡೆಸುವ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ಈ ಬಾರಿಯ ದಸರಾವನ್ನು ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ವಿವಿಧ ಕಾರ್ಯಕ್ರಮಗಳ ಪ್ರಾಯೋಜಕತ್ವ ವಹಿಸುವ ಮೂಲಕ ನಾಡಹಬ್ಬದಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿರುವ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನವರಾತ್ರಿಯ ದಿನಗಳಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕ್ಗಳು ಹಾಗೂ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಇತರೆ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು ಎಲ್ಲಾ ಚಟುವಟಿಕೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಹಲವಾರು ಕೈಗಾರಿಕೆಗಳು, ಎನ್.ಜಿ.ಒ ಹಾಗೂ ಖಾಸಗಿ ಕಂಪನಿಗಳು ಸಾಮಾಜಿಕ ಕಳಕಳಿಯಿಂದ ಹಲವಾರು ರೀತಿಯಲ್ಲಿ ಸಹಾಯ ನೀಡುವುದರ ಮೂಲಕ ಉತ್ತಮವಾಗಿ ಸ್ಪಂದಿಸಿದ್ದಕ್ಕಾಗಿ ಧನ್ಯವಾದ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಮಾತನಾಡಿ, ಈ ಬಾರಿಯ ದಸರಾದಲ್ಲಿ ನಡೆಯುವ ಯುವ ದಸರಾ ಹಾಗೂ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಬಾಲಿವುಡ್ ನೈಟ್ ಹಾಗೂ ಸ್ಯಾಂಡಲ್‌ವುಡ್ ನೈಟ್ ಎಂಬ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಸಂಗೀತಗಾರರನ್ನು ಅಥವಾ ನಟರನ್ನು ಕರೆಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.