ಮೈಸೂರು: ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಲು ರಚಿಸಿರುವ ಅಧಿಕಾರಿಗಳ ತಂಡವು ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಎಎಸ್‍ಐ, ಚೆಸ್ಕಾಂ ಮತ್ತು ನೋಡಲ್ ಅಧಿಕಾರಿಗಳು ಸೇರಿದಂತೆ ರಚಿಸಿರುವ ಮೂವರು ಅಧಿಕಾರಿಗಳ ತಂಡವು ಕೋವಿಡ್ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳ ಚಲವಲನದ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು. ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರ ಸೂಚಿಸುವ ಸೋಂಕಿತರಿಗೆ ಮೀಸಲಿಟ್ಟಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಹಾಸಿಗೆಗಳ ಕೊರತೆ ಉಂಟಾಗದಂತೆ ಆಸ್ಪತ್ರೆಗೆ ಭೇಟಿ ನೀಡಿ ಹಾಸಿಗೆ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯಬೇಕು ಎಂದರು.
ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ದರವನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೋಂಕಿತರ ಕುಟುಂಬಸ್ಥರಿಂದ ಮಾಹಿತಿ ಪಡೆಯಬೇಕು. ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಅದನ್ನು ವಾಪಸ್ ಕೊಡಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.