ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮನವಿ ಮಾಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ. ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥ್ಸ್ವಾಮಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುಮಾರು 900 ಮಂದಿ ಮೃತಪಟ್ಟಿದ್ದಾರೆ. ಸುಮಾರು 6800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ. ಕಳೆದ ವರ್ಷ ದಸರಾ ಸಮಯದಲ್ಲಿ ಲಕ್ಷಾಂತರ ಜನ ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಸೋಂಕು ಹರಡುತ್ತಿರುವುದರಿಂದ ಈ ಸಂಖ್ಯೆಯ ಜನರು ಮೈಸೂರಿಗೆ ಆಗಮಿಸಿದರೆ ಹೆಚ್ಚಿನ ಜನರಿಗೆ ಸೋಂಕು ಹರಡಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ ಪ್ರವೇಶವನ್ನು ಅಕ್ಟೋಬರ್ 14 ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ನಿರ್ಬಂಧಿಸಲಾಗಿದೆ. ಮೈಸೂರಿಗೆ ಸಮೀಪದ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಭಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದರು.