ಮೈಸೂರು: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನ್ ವಿದ್ಯಾರ್ಥಿಗಳಿಗೆ ಉಂಟಾಗುವ ವೀಸಾ ಸಮಸ್ಯೆಯನ್ನು ವಿದೇಶಾಂಗ ಸಚಿವರ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನ್ ವಿದ್ಯಾರ್ಥಿಗಳಿಗೆ ಉಂಟಾಗುವ ವೀಸಾ ಸಮಸ್ಯೆಯ ಬಗ್ಗೆ ವಿದೇಶಾಂಗ ಸಚಿವರ ಗಮನಕ್ಕೆ ತಂದು ಆದಷ್ಟು ಬಗೆಹರಿಸಲಾಗುವುದು ಎಂದರು.
ಅಫ್ಘನ್ ವಿದ್ಯಾರ್ಥಿಗಳ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ.. ಜೊತೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪನ್ಯಾಸಕರ ನೇಮಕಾತಿ ಅಕ್ರಮದ ಬಗ್ಗೆ ಮಾತನಾಡಿದ ಸಚಿವರು, ಯಾರೇ ಆದರೂ ಕಾನೂನನ್ನು ಉಲ್ಲಂಘನೆ ಮಾಡಿದರೆ ಖಂಡಿತವಾಗಿಯೂ ಕ್ರಮಕೈಗೊಳ್ಳುತ್ತೇವೆ. ಸದ್ಯದ ಆರ್ಥಿಕ ಸ್ಥಿತಿಯಲ್ಲಿ ಹೊಸ ನೇಮಕಾತಿಗಳು ಕಷ್ಟವಾಗಿದ್ದು, ಆದರೂ ಬೋಧನೆಗೆ ತೊಡಕಾಗದ ರೀತಿಯಲ್ಲಿ ಅತಿಥಿ ಉಪನ್ಯಾಸಕರು ಹಾಗೂ ಇತರ ಸಂಪನ್ಮೂಲಗಳಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಸ್ನೇಹಿಯಾಗಿದೆ. ಸರಳ ಹಾಗೂ ಸುಂದರವಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಈ ಶಿಕ್ಷಣ ನೀತಿ ಉತ್ತಮವಾಗಿದೆ. ಕಲಿಕೆಯಲ್ಲಿ ಯಾವುದೇ ತೊಡಕಿಲ್ಲ. ಈ ಶಿಕ್ಷಣ ನೀತಿ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ಜತೆಗೆ ಸರ್ವತೋಮುಖ ಅಭಿವೃದ್ಧಿ ಮಾಡಲು ಸಹಕಾರಿ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಈಗ ವಿದ್ಯಾರ್ಥಿಗಳ ಸಮಸ್ಯೆಗೆ ದೊಡ್ಡ ಪರಿಹಾರ ನೀಡುವಲ್ಲಿ ಹೊಸ ಶಿಕ್ಷಣ ನೀತಿ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ : ದೇಶದಲ್ಲಿ ಲೂಟ್ ಇಂಡಿಯಾ, ಸೆಲ್ ಸರ್ಕಾರ ನಡಿತಿದೆ: ಖಾದರ್ ವಾಗ್ದಾಳಿ