ಮೈಸೂರು: "ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತವಾಗಿದ್ದು, ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ" ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದರು. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
"ರಾಜ್ಯದ ಅಯಾ ಭಾಗದ ಜನರ ಆಹಾರ ಪದ್ಧತಿಗೆ ಅನುಗುಣವಾಗಿ ಪಡಿತರ ವಿತರಣೆ ಮಾಡಲಾಗುವುದು. ಕೆಲವು ಜಿಲ್ಲೆಗಳಲ್ಲಿ ಅಕ್ಕಿ ಜೊತೆ ರಾಗಿ ವಿತರಣೆ ಮಾಡಿದರೆ, ಕೆಲವು ಕಡೆ ಅಕ್ಕಿ ಜೊತೆ ಜೋಳ ವಿತರಣೆ ಮಾಡಲಾಗುವುದು. 10 ಕೆಜಿ ಅಕ್ಕಿ ವಿತರಣೆ ಮಾಡುವ ಗುರಿ ಇದೆ. ಆದರೆ, ಕೇಂದ್ರ ಹೆಚ್ಚುವರಿ ಅಕ್ಕಿಯನ್ನು ನೀಡುತ್ತಿಲ್ಲ. ಹಾಗಾಗಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿದ್ದೇವೆ. ಶೀಘ್ರವೇ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್ಗಢ ರಾಜ್ಯಗಳಿಂದ ಅಕ್ಕಿ ಪಡೆದು ವಿತರಣೆ ಮಾಡಲಾಗುವುದು" ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
"ಒಂದು ರಾಷ್ಟ್ರ ಒಂದು ಪಡಿತರ ಯೋಜನೆಯಿಂದ ರಾಜ್ಯದಲ್ಲಿರುವ 10 ಸಾವಿರ ಕಾರ್ಡುದಾರರಿಗೆ ಅಕ್ಕಿ ವಿತರಣೆ ಮಾಡಬೇಕಾಗಿದ್ದು, ಬಿಪಿಎಲ್ ಕಾರ್ಡುದಾರರು ತಮ್ಮ ಸುತ್ತಮುತ್ತಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ತೆಗೆದುಕೊಳ್ಳಬಹುದು. ನಮ್ಮ ರಾಜ್ಯದಲ್ಲಿ ನಾಲ್ಕು ಕೋಟಿ ಕಾರ್ಡುದಾರರಿಗೆ ಪಡಿತರ ವಿತರಣೆ ಮಾಡುತ್ತಿದ್ದೇವೆ. 40 ಲಕ್ಷ ಕಾರ್ಡುದಾರರಿಗೆ ಪಡಿತರ ಸಿಗುತ್ತಿಲ್ಲ, ಉಳಿದ 40 ಲಕ್ಷ ಕಾರ್ಡುದಾರರಿಗೂ ಪಡಿತರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ" ಎಂದು ಹೇಳಿದರು.