ಮೈಸೂರು:ಕರ್ನಾಟಕ ಪೊಲೀಸರು ದಕ್ಷತೆಗೆ ಹೆಸರಾಗಿರುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದಿಸಿದರು.
ಈ ಕುರಿತಂತೆ ಸಚಿವರು ಪ್ರಕಟಣೆಯನ್ನು ಹೊರಡಿಸಿದ್ದು, ಚಾಮುಂಡಿ ಬೆಟ್ಟದ ನಿರ್ಜನ ಪ್ರದೇಶದಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು (ಬಾಲ ಆರೋಪಿ ಸೇರಿ) ಪೊಲೀಸರು ಚುರುಕು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯನ್ನು ಸಚಿವರು ಅಭಿನಂದಿಸಿದ್ದಾರೆ.
ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ 5 ಲಕ್ಷ ರೂ. ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಲಭಿಸುವಂತೆ ಮಾಡಲಿದ್ದಾರೆ ಎಂದರು.
ಜ್ಯುವೆಲ್ಲರಿ ಶಾಪ್ನಲ್ಲಿ ನಡೆದ ಶೂಟೌಟ್ ದರೋಡೆಕೋರರನ್ನು ಬಂಧಿಸುವಲ್ಲಿ ಮೈಸೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗೂಂಡಾಗಿರಿ ನಡೆಯುವುದಿಲ್ಲ ಎಂಬುದನ್ನು ದೇಶಕ್ಕೆ ತೋರಿಸಿಕೊಡಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿ ಪಾಲನೆಯಾಗುವಲ್ಲಿ ಪೊಲೀಸರ ಪಾತ್ರ ಬಹಳ ದೊಡ್ಡದಿದೆ. ಕರ್ನಾಟಕದ ಪೊಲೀಸರ ಬಗ್ಗೆ ದೇಶದಲ್ಲೇ ಉತ್ತಮ ಹೆಸರಿದ್ದು, ದಕ್ಷ, ಪ್ರಾಮಾಣಿಕ ಅಧಿಕಾರಿಗಳು, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಮೈಸೂರಿನಲ್ಲಿಯೂ ಸಹ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಈಗಾಗಲೇ ಸೂಚನೆ ನಿಡಲಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.