ಮೈಸೂರು: ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ. ಇದರ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮೈಸೂರಿನಲ್ಲಿ ಹೇಳಿದ್ದಾರೆ.
ಬೈಯೋಮೆಟ್ರಿಕ್ ಹಾಜರಾತಿ ಕಡ್ಡಾಯ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ 6 ವೈದ್ಯಕೀಯ ಕಾಲೇಜುಗಳಿವೆ. ಈ ವ್ಯಾಪ್ತಿಯಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುತ್ತಿಲ್ಲ. ಇದೇ ಸಮಯದಲ್ಲಿ ಬೇರೆ ಕಡೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ದೂರುಗಳಿವೆ. ಮುಖ್ಯವಾಗಿ, ಸರ್ಕಾರಿ ವೈದ್ಯರು ಬೇರೆ ಕಡೆ ಅಂದರೆ ಕ್ಲಿನಿಕ್ನಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಹಾಗಾಗಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ.
ಇದರೊಂದಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಕುರಿತು ಚರ್ಚಿಸಲಾಗಿದ್ದು, ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗುವುದು. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಬಡ ರೋಗಿಗಳ ಸೇವೆ ಮಾಡಬೇಕು. ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ಮುಗಿದ ನಂತರ ಬೇಕಾದರೆ ಖಾಸಗಿಯಾಗಿ ಪ್ರಾಕ್ಟೀಸ್ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.