ಮೈಸೂರು :SSLC ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯಕ್ಕಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಜಿಪಂ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ್ದೇವೆ. ಅದೇ ಮಾದರಿಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದರು.
ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿಲ್ಲ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಎಸ್ಎಸ್ಎಲ್ಸಿ ನಂತರ ಪಿಯುಸಿಯಲ್ಲಿ ಯಾವ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಓದಿ : ಪಕ್ಷ ಬಿಟ್ಟವರು ಮತ್ತೆ ಕಾಂಗ್ರೆಸ್ ಸೇರಲು ಸಂಪರ್ಕದಲ್ಲಿದ್ದಾರೆ: ಶಾಸಕ ಬಯ್ಯಾಪುರ
ಪರೀಕ್ಷೆ ನಡೆಸುವ ಸಂಬಂಧ ಈ ವಾರವೇ ಎಲ್ಲಾ ಜಿಲ್ಲೆಗಳ ಡಿಡಿಪಿಐ ಮತ್ತು ಬಿಇಒಗಳ ಸಭೆ ನಡೆಸಲಾಗುವುದು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ಅವರ ಗೊಂದಲ, ಅನುಮಾನಗಳನ್ನು ನಿವಾರಣೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಈಗಾಗಲೇ ಎರಡು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಲಾಗಿದೆ. ಈ ಮೂಲಕ ಗೊಂದಲವಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ರಾಜ್ಯದಲ್ಲಿ 8,76,581 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಇಷ್ಟೊಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಸವಾಲಿನ ಕೆಲಸವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಕಳೆದ ಬಾರಿಯಂತೆ ಸುಸೂತ್ರವಾಗಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಚಿವ ಸುರೇಶ್ ಕುಮಾರ್, ಕೇವಲ ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆಯ ಬಗ್ಗೆ ಮಾತ್ರ ಮಾತನಾಡಿದರು. ಹೆಚ್. ವಿಶ್ವನಾಥ್ ಹೇಳಿಕೆ ಬಗ್ಗೆ ಕೇಳುತ್ತಿದ್ದಂತೆ ಸಿಡಿಮಿಡಿಗೊಂಡ ಅವರು, ಯಾವುದೇ ಪ್ರತಿಕ್ರಿಯೆ ನೀಡದೆ ಸ್ಥಳದಿಂದ ನಿರ್ಗಮಿಸಿದರು.