ಮೈಸೂರು: 'ನಿನಗೆ ತಾಕತ್ತಿದ್ದರೆ ಡಿಸಿ ವರ್ಗಾವಣೆ ಮಾಡಿಸು' ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ಸವಾಲು ಹಾಕಿದ್ದಾರೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಸುಖಾ ಸುಮ್ಮನೆ ಹಾದಿಬೀದೀಲಿ ನಿಂತು ಮಾತನಾಡಬೇಡ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಹುಲಿ ಆಗಲ್ಲ' ಎಂದು ಕುಟುಕಿದರು.
'ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿಮಗಿಂತ ಹೆಚ್ಚು ಕೆಲಸ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು?. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ಸ್ಟೇಟ್‌ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡಿಸ್ತೀರಾ? ಜನರು ಮೈಸೂರಿನ ಬಗ್ಗೆ ಆಡಿಕೊಂಡು ನಗುತ್ತಿದ್ದಾರೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
'ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ'
'ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ. ಕೊರೊನಾದಿಂದ ರಾಜ್ಯದಲ್ಲಿ ಅನೇಕ ಜನರು ಸಾಯ್ತಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲು ಹೊರಟಿರುವುದು ಸರಿಯಲ್ಲ. ಜನರ ಕಷ್ಟ ನೋಡುವ ಬದಲು ದೆಹಲಿಗೆ ಹೋಗುವ ಅಗತ್ಯವಿತ್ತೇ?. ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕೆಲಸ ಮಾಡಲು ಬಿಡಿ. ಸರ್ಕಾರ ಬೀಳಸಲು ಪ್ರಯತ್ನ ಮಾಡಿರುವುದು ಸರಿಯಲ್ಲ' ಎಂದು ಹೇಳಿದರು.