ಮೈಸೂರು: ಬಿಜೆಪಿ ಪಕ್ಷವು ಸಾವಿನ ಮನೆಯಲ್ಲಿ ರಾಜಕೀಯ ಮಾಡಿ ಜಾತಿ-ಜಾತಿಗಳ ನಡುವೆ ಕೋಮುಗಲಭೆ ಸೃಷ್ಟಿಸುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಯುವಕನ ಹತ್ಯೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು. ಇಂತಹ ಘಟನೆಗಳನ್ನ ನಾವು ಸಹಿಸುವುದಿಲ್ಲ. ಬಿಜೆಪಿಯು ಸಾವಿನ ಮನೆಯಲ್ಲಿ ರಾಜಕೀಯ ಮಾಡಿ, ಜಾತಿಗಳ ನಡುವೆ ಕೋಮುಗಲಭೆ ಸೃಷ್ಟಿಸುತ್ತಿದೆ. ವಿಷ ಬೀಜ ಬಿತ್ತುವುದೇ ಬಿಜೆಪಿಯ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸದನ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಯುತ್ತಲೇ ಇದೆ. ಮುಂದೆಯೂ ಹೋರಾಟ ಮುಂದುವರೆಸುತ್ತೇವೆ. ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದರು.
ಬಿಜೆಪಿ ನಾಯಕರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ಹಿನ್ನೆಲೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸಚಿವ ಈಶ್ವರಪ್ಪ ಅವರ ಹೇಳಿಕೆ ಇದೀಗ ದೇಶದ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಹೇಳಿದರು.
ಇದನ್ನೂ ಓದಿ:ಸೂಚನೆಯಿಲ್ಲದೇ ಗಡಿಗಳಿಗೆ ತೆರಳಬೇಡಿ : ಉಕ್ರೇನ್ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ