ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕಾಂಗ್ರೆಸ್ ಎರಡು ನಾಲಿಗೆ ನೀತಿಯನ್ನು ಅನುಸರಿಸುತ್ತಿದೆ. ಇದರಿಂದ ಗಲಭೆಗಳಾಗುತ್ತಿವೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ಕಿಡಿಕಾರಿದ್ದಾರೆ.
ಇಂದು ನಗರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರವಿಕುಮಾರ್, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಇದಕ್ಕೆ ಕಾರಣ ಏನು ಎಂಬುದು ಗೊತ್ತಾಗುತ್ತಿಲ್ಲ. ಈ ಕಾಯ್ದೆ ವಿರೋಧಿಸುತ್ತಿರುವ ಕಾಂಗ್ರೆಸ್ ಎರಡು ನಾಲಿಗೆ ನೀತಿಯನ್ನು ಅನುಸರಿಸುತ್ತಿರುವುದರಿಂದ ಗಲಭೆಗಳು ಆಗುತ್ತಿವೆ. ಈ ಕಾಯ್ದೆ ದೇಶದಲ್ಲಿ ನಾಲ್ಕು ಬಾರಿ ತಿದ್ದುಪಡಿಯಾಗಿದ್ದು ಆಗ ಇದರ ಬಗ್ಗೆ ಪ್ರತಿಭಟನೆಗಳು ನಡೆಯಲಿಲ್ಲ. ಈಗ ಪ್ರತಿಭಟನೆ ನಡೆಯುವುದಕ್ಕೆ ಕಾಂಗ್ರೆಸ್ ಹಾಗೂ ಮಮತಾ ಬ್ಯಾನರ್ಜಿಯವರ ವೋಟ್ ಬ್ಯಾಂಕ್ ರಾಜಕಾರಣವೇ ಕಾರಣ ಎಂದು ಟೀಕಾಪ್ರಹಾರ ನಡೆಸಿದರು.